ಉಡುಪಿ, ಜುಲೈ 26 : ಶಿಕ್ಷಣದಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರಿಂದು ಕೊಕ್ಕರ್ಣೆ ಸರಕಾರಿ ಪಿಯುಸಿ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿದ ಸಚಿವರು, ವಿದ್ಯಾಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳು ವಿದ್ಯಾರ್ಜನೆಗೆ ಆದ್ಯತೆ ನೀಡಿ; ವಿದ್ಯೆಗಿಂತ ಮಿಗಿಲಾದ ಸಂಪತ್ತಿಲ್ಲ ಎಂದರು. ಎಲ್ಲ ಮಕ್ಕಳಿಗೂ ಶಾಲಾಕಲಿಕೆ ಲಭ್ಯವಾಗಿಸಲು ಬಿಸಿಯೂಟದಿಂದ ಷೂ ವಿತರಣೆವರೆಗೆ ಎಲ್ಲ ಸೌಲಭ್ಯಗಳನ್ನು ನೀಡಲಾಗಿದ್ದು, ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮರಾಗಿ ಬಾಳಿ ಎಂದರು.

ಈಗಾಗಲೇ ಕೊಕ್ಕರ್ಣೆಗೆ ಐಟಿಐ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಸಂಸ್ಥೆ ಆಸಕ್ತಿ ವಹಿಸದಿದ್ದರೆ ಬ್ರಹ್ಮಾವರಕ್ಕೆ ಐಟಿಐ ಬದಲಾವಣೆ ಮಾಡಲಾಗುವುದು ಎಂಬ ಎಚ್ಚರಿಕೆಯನ್ನೂ ಸಚಿವರು ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮೈರ್ಮಾಡಿ ಸುಧಾಕರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯರಾದ ಸುನೀತಾ ಶೆಟ್ಟಿ, ಭುಜಂಗ ಶೆಟ್ಟಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಆಶಾಲತಾ, ಉಪಾಧ್ಯಕ್ಷರಾದ ದೇವಕಿ ಕೋಟ್ಯಾನ್, ಶಾಲಾ ಪ್ರಾಂಶುಪಾಲರು, ಉಪನ್ಯಾಸಕರು ಇದ್ದರು.