BANTWAL
ಶರತ್ ಹತ್ಯೆ: ಎನ್‌ಐಎ ತನಿಖೆಗೆ ಕೇಂದ್ರ ಗೃಹ ಸಚಿವರಿಗೆ ಮನವಿ
ಮಂಗಳೂರು, ಜುಲೈ 18: ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಬಳಿ ನಡೆದ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ಕುರಿತು ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆ ನಡೆಸಬೇಕೆಂದು ಕೋರಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ನೇತೃತ್ವದಲ್ಲಿ ಬಿಜೆಪಿ ಸಂಸದರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದ್ದಾರೆ ,
ಸೋಮವಾರ ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ನಳಿನ್ ಕುಮಾರ್ ಕಟೀಲ್ ಅವರು,ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಿಂದೂ ಯುವಕರ ಹತ್ಯೆ, ಹತ್ಯೆ ಯತ್ನದ ಮಾಹಿತಿ ನೀಡಿ, ಇದಕ್ಕೆ ಕಾರಣವಾಗುತ್ತಿರುವ ಇಸ್ಲಾಂ ಮೂಲಭೂತವಾದಿ ಸಂಘಟನೆಗಳಾದ ಕೆಎಫ್ಡಿ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಸಂಬಂಧ ರಾಜ್ಯ ಸರ್ಕಾರದಿಂದ ವರದಿ ತರಿಸಿಕೊಂಡು ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಬೇಕು ಮನವಿ ಮಾಡಿದ್ದಾರೆ.
ಇಸ್ಲಾಂ ಮೂಲಭೂತವಾದಿ ಸಂಘಟನೆಗಳು ಭಟ್ಕಳವನ್ನು ತಮ್ಮ ಕಾರಸ್ಥಾನವಾಗಿ ಮಾಡಿಕೊಂಡು ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಗಳನ್ನು ಭಟ್ಕಳದ ಮಾದರಿ ಪರಿವರ್ತಿಸಲು ಪ್ರಯತ್ನಿಸುತ್ತಿವೆ. ಹಿಂದೂ ಯುವಕರ ಮೇಲೆ ಹಲ್ಲೆ ಮಾಡಿ ಅವರನ್ನು ಹತ್ಯೆ ಮಾಡುವ ಕೃತ್ಯಗಳನ್ನು ಮುಂದುವರಿಸಿವೆ. ಆದ್ದರಿಂದ ಮಂಗಳೂರಿನಲ್ಲಿ ಎನ್‌ಐಎ ಕಚೇರಿ ತೆರೆದು ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಗೃಹ ಸಚಿವರಿಗೆ ಮನವಿ ಮಾಡಿದರು.
You must be logged in to post a comment Login