SPORTS
ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ- ಪ್ರಮೋದ್
ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಆದ್ಯತೆ- ಪ್ರಮೋದ್
ಉಡುಪಿ, ನವೆಂಬರ್ 4: ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ಮುಂತಾದ ಇಲಾಖೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡುವಾಗ ಕ್ರೀಡಾಪಟುಗಳಿಗೆ ಆದ್ಯತೆ ನೀಡಲಾಗುವುದು ಎಂದು ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಮೋದ್ ಮದ್ವರಾಜ್ ಹೇಳಿದರು.
ಅವರು ಶನಿವಾರ, ಪದವಿಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸಂತ ಸಿಸಿಲಿ ಸಂಯುಕ್ತ ಪದವಿ ಪೂರ್ವ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಿದರೆ, ಶೈಕ್ಷಣಿಕ ಕ್ಷೇತ್ರದಲ್ಲಿ ಹೆಚ್ಚಿನ ಲಾಭವಿದೆ ಎಂಬುವುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಅದಕ್ಕಾಗಿ ರಾಜ್ಯ ಸರಕಾರ ಹೊಸ ಕ್ರೀಡಾ ನೀತಿಯೊಂದನ್ನು ಜಾರಿಗೆ ತರುತ್ತಿದೆ. ಈ ನೀತಿಯನ್ವಯ ಕ್ರೀಡಾ ವಿದ್ಯಾರ್ಥಿಗಳಿಗೆ ಹಾಜರಾತಿ, ಹೆಚ್ಚುವರಿ ಅಂಕ ನೀಡಲಾಗುತ್ತದೆ ಮತ್ತು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಕ್ರೀಡಾಪಟುಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎಸ್.ಎಂ.ಎಸ್ ಕಾಲೇಜು ನಿಟ್ಟೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.