UDUPI
ಸ್ವಚ್ಛತೆ ಬಗ್ಗೆ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಬೇಕಿದೆ- ದಿನಕರ ಬಾಬು
ಉಡುಪಿ, ಜುಲೈ 25 :- ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕ ರೀತಿಯಲ್ಲಿ ಮಾಡಿ ಸ್ವಚ್ಛತೆ ಕಾಪಾಡುವ ಬಗ್ಗೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.
ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಉಡುಪಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಐ.ಎಸ್.ಪಿ.ಆರ್.ಎಲ್ ಉಡುಪಿ ಇವರ ಸಹಯೋಗದಲ್ಲಿ, ಉಡುಪಿ ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಘನ ಮತ್ತು ದ್ರವತ್ಯಾಜ್ಯ ವಿಲೇವಾರಿ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲೆಯು ಹಲವು ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ, ಆದರೆ ಸಂಗ್ರಹಿಸಿದ ತ್ಯಾಜ್ಯವನ್ನು ಸಮರ್ಪಕವಾಗಿ ಉಪಯೋಗಿಸಿಕೊಳ್ಳುವಲ್ಲಿ ಹಿಂದೆ ಇದ್ದೇವೆ, ಈ ಕುರಿತು ಜಿಲ್ಲೆಯು ನಿರೀಕ್ಷಿತ ಸಾಧನೆ ಮಾಡಲು ಗ್ರಾಮೀಣ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಜನಪ್ರತಿನಿಧಿಗಳಿಗೆ ಜಾಗೃತಿ ಮೂಡಿಸಬೇಕಿದೆ ಅಲ್ಲದೇ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೂ ಸಹ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗಿದೆ. ಮಳೆ ನೀರನ್ನು ಸಂಗ್ರಹಿಸುವ ಮತ್ತು ಅಂರ್ತಜಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಲ ಜಾಗೃತಿ ಮೂಡಿಸಿ, ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ದಿನಕರ ಬಾಬು ಹೇಳಿದರು.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರ್ರಾನಿಸ್ ಮಾತನಾಡಿ, ಇಡೀ ಜಿಲ್ಲೆಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಅಧಿಕವಾಗಿದೆ, ತ್ಯಾಜ್ಯ ವಿಲೇವಾರಿಗೆ ಅಗತ್ಯವಿರುವ ಸರಕಾರಿ ಭೂಮಿಯ ಕೊರತೆ ಹಾಗೂ ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡಲು ಪರಿಣಿತರ ಕೊರತೆ ಇದೆ, ಜಿಲ್ಲೆಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಾಗಾರ ಏರ್ಪಡಿಸಿದೆ, ವಾಸ್ತವದಲ್ಲಿ ಕಸ ಎಂಬುದು ಇಲ್ಲ, ಸಮರ್ಪಕವಾಗಿ ಬಳಸಿದರೆ ಕಸ ಒಂದು ಸಂಪನ್ಮೂಲ, ಇದರಿಂದ ಆದಾಯ ಗಳಿಸಬಹುದಾಗಿದೆ, ಜಿಲ್ಲೆ ಈಗಾಗಲೇ ಬಯಲು ಶೌಚ ಮುಕ್ತ ಜಿಲ್ಲೆಯಾಗಿ ಘೋಷಣೆಯಾಗಿದೆ, ಇಡೀ ದೇಶದಲ್ಲಿ ಉಡುಪಿ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮಾದರಿ ಜಿಲ್ಲೆಯನ್ನಾಗಿ ಮಾಡುವುದು ಎಲ್ಲರ ಜವಾಬ್ದಾರಿ ಎಂದು ಹೇಳಿದರು.
ಕಾರ್ಯಗಾರದ ಸಂಪನ್ಮೂಲ ವ್ಯಕ್ತಿ ಇಂಡಿಯನ್ ಗ್ರೀನ್ ಸರ್ವಿಸ್ ವೆಲ್ಲೂರಿನ ಯೋಜನಾ ನಿರ್ದೇಶಕ ಶ್ರೀನಿವಾಸನ್ ಮಾತನಾಡಿ, ಉಡುಪಿ ಜಿಲ್ಲೆಯನ್ನು 2018 ರ ಆಗಸ್ಟ್ 2 ರ ಒಳಗೆ ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ, ಇನ್ನು ಮುಂದೆ ಜಿಲ್ಲೆಯಲ್ಲಿ ಘನ ಮತ್ತು ದ್ರವ ತ್ಯಾಜ್ಯವನ್ನು ಸಂಪನ್ಮೂಲವನ್ನಾಗಿ ಪರಿವರ್ತಿಸಲಾಗುವುದು, ತ್ಯಾಜ್ಯವನ್ನು ಸಂಪನ್ಮೂಲ ಎಂದು ಪರಿಗಣಿಸಬೇಕಿದೆ, ತಾನು 2013-14 ರಲ್ಲಿ ಬೆಂಗಳೂರಿನಲ್ಲಿ ಅಧ್ಯಯನ ಮಾಡಿದ ಪ್ರಕಾರ ಅಲ್ಲಿ ಉತ್ಪಾದನೆಯಾಗುವ ಕಸದಿಂದ ತಿಂಗಳಿಗೆ ಕನಿಷ್ಠ 27 ಕೋಟಿ ಆದಾಯ ಗಳಿಸಬಹುದಾಗಿದ್ದು, ಅಷ್ಟು ಪ್ರಮಾಣದ ಆದಾಯ ಕಸದ ರೂಪದಲ್ಲಿ ವ್ಯರ್ಥವಾಗುತ್ತಿದೆ, ತಾವು ಈಗಾಗಲೇ ಈಶಾನ್ಯ ಭಾರತದ ಅಸ್ಸಾಂನ ಒಂದು ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಜಿಲ್ಲೆಯನ್ನಾಗಿ ರೂಪುಗೊಳಿಸಿದ್ದು, ಪ್ರಸ್ತುತ ಉಡುಪಿ ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮಾಡಲು ಆಯ್ಕೆ ಮಾಡಿದ್ದು, ಇದರಿಂದಾಗಿ ಇಡೀ ದಕ್ಷಿಣ ಭಾರತದಲ್ಲಿ ಉಡುಪಿ ಮೊದಲು ತ್ಯಾಜ್ಯ ಮುಕ್ತ ಜಿಲ್ಲೆಯಾಗಲಿದ್ದು, ಇದೇ ಆಗಸ್ಟ್ 15 ರಂದು ಉಡುಪಿಯ ಕೆಲವು ಗ್ರಾಮಗಳನ್ನು ಪೈಲಟ್ ಯೋಜನೆಯಲ್ಲಿ ತೆಗೆದುಕೊಂಡು ಕಾರ್ಯ ನಿರ್ವಹಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ, ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಕುಂದಾಪುರ ತಾ.ಪಂ. ಅಧ್ಯಕ್ಷೆ ಜಯಶ್ರೀ ಮೋಗವೀರ, ಕಾರ್ಕಳ ತಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ, ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯ, ಕಾರ್ಕಳ ಪುರಸಭೆ ಅಧ್ಯಕ್ಷೆ ಅನಿತಾ ಅಂಚನ್, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಸಾರಂಗ್, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ರತ್ನಾ ನಾಗರಾಜ್ , ಮತ್ತಿತರರು ಉಪಸ್ಥಿತರಿದ್ದರು.