ಭುವನೇಶ್ವರ ಮಾರ್ಚ್ 16: ಒಡಿಶಾದ ಕಟಕ್ನಲ್ಲಿರುವ ಎಸ್ಸಿಬಿ ಸರ್ಕಾರಿ ವೈದ್ಯಕೀಯ ಕಾಲೇಜಿನ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಬೆಂಕಿ ಅನಾಹುತದಲ್ಲಿ 10 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 11 ಮಂದಿ ಆಸ್ಪತ್ರೆ ಸಿಬ್ಬಂದಿಗೂ ಗಾಯಗಳಾಗಿವೆ.

ಇಂದು ಮುಂಜಾನೆ ಸುಮಾರು 2:30 ರಿಂದ 3:00 ಗಂಟೆಯ ಅವಧಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಆ ಸಮಯದಲ್ಲಿ ಟ್ರಾಮಾ ಕೇರ್ ಘಟಕ ಮತ್ತು ಪಕ್ಕದ ವಾರ್ಡ್ಗಳಲ್ಲಿ ಒಟ್ಟು 23 ರೋಗಿಗಳಿದ್ದರು. ಸಾವನ್ನಪ್ಪಿದ 10 ಮಂದಿಯ ಪೈಕಿ 7 ಮಂದಿ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಅಥವಾ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ, ರೋಗಿಗಳನ್ನು ಸ್ಥಳಾಂತರಿಸುವ ಕೆಲಸ ಮಾಡಿದರು. ರಕ್ಷಣೆ ಮಾಡುವ ವೇಳೆ 11 ಸಿಬ್ಬಂದಿಗಳು ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಅವರು ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು, ಅಗ್ನಿಶಾಮಕ ದಳದ ಡಿಜಿಗೆ ತಕ್ಷಣದ ವರದಿ ಸಲ್ಲಿಸಲು ಸೂಚಿಸಿದ್ದಾರೆ. “ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು,” ಎಂದು ಸಿಎಂ ಎಚ್ಚರಿಸಿದ್ದಾರೆ.