BANTWAL
ಕಾರಿಂಜ ದೇವಸ್ಥಾನದ 2 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿ ಸರಕಾರ ಆದೇಶ
ಬಂಟ್ವಾಳ ಮಾರ್ಚ್ 15: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕಾರಿಂಜ ದೇವಸ್ಥಾನದ ಸಂರಕ್ಷಣೆಗಾಗಿ ಪರಿಸರದಲ್ಲಿ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಲು ಮತ್ತು ಪಾವಿತ್ರ್ಯ ಉಳಿಸಲು ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆಯು ಮನವಿ, ಹೋರಾಟ ನಡೆಸಿತ್ತು. ಅದಕ್ಕೆ ಪೂರಕವಾಗಿ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ಕುಮಾರ್ ಅವರನ್ನು ಕ್ಷೇತ್ರಕ್ಕೆ ಕರೆಸಿ ಗಣಿಗಾರಿಕೆ ನಿಷೇಧ ಪ್ರದೇಶವೆಂದು ಘೋಷಿಸುವಂತೆ ಸರಕಾರಕ್ಕೆ ಒತ್ತಡ ಹೇರಿದ್ದರು.
ಮುಖ್ಯಮಂತ್ರಿಗಳ ನಿರ್ದೇಶನದಂತೆ ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲು ದ.ಕ. ಜಿಲ್ಲಾಧಿಕಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ಸಹಾಯಕ ಕಮಿಷನರ್ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರ ಮೂಲಕ ದೇವಸ್ಥಾನದ ಸುತ್ತಮುತ್ತ ಜಂಟಿ ಸ್ಥಳ ಪರಿಶೀಲನೆ ನಡೆಸಲಾಗಿತ್ತು.
ಈ ಪರಿಶೀಲನೆಯ ವರದಿಯ ಆಧಾರದಲ್ಲಿ ಜಿಲ್ಲಾಧಿಕಾರಿಯವರು ಕಾರಿಂಜ ದೇವಸ್ಥಾನದ ಸುತ್ತಮುತ್ತ 2 ಕಿ.ಮೀ. ವ್ಯಾಪ್ತಿಯನ್ನು ಗಣಿಗಾರಿಕೆ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವ ಕುರಿತು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು
ಪ್ರಸ್ತುತ ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳು 1994ರ ನಿಯಮ 8(3)ರಲ್ಲಿನ ಅಧಿಕಾರವನ್ನು ಚಲಾಯಿಸಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಗಣಿಗಾರಿಕೆ ನಿಷೇಧಿಸಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ನೀಡಿದ್ದಾರೆ.