LATEST NEWS
ಆಂಧ್ರಪ್ರದೇಶ – ಕಾರಿನಲ್ಲಿ ಉಸಿರುಗಟ್ಟಿ ಸಾವನಪ್ಪಿದ ನಾಲ್ಕು ಪುಟಾಣಿ ಮಕ್ಕಳು

ಆಂಧ್ರ ಪ್ರದೇಶ ಮೇ 19: ನಿಲ್ಲಿಸಿದ್ದ ಕಾರಿನಲ್ಲಿ ಆಟ ಆಡಲು ಹೋದ ನಾಲ್ಕು ಮಕ್ಕಳು ಉಸಿರುಗಟ್ಟಿ ಸಾವನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಡೆದಿದೆ.
ಮೃತ ಮಕ್ಕಳನ್ನು ಮಂಗಿ ಉದಯ್ (8), ಬುರ್ಲೆ ಚಾರುಮತಿ (8), ಬುರ್ಲೆ ಚರಿಷ್ಮಾ (6) ಮತ್ತು ಕಂಡಿ ಮನಸ್ವಿನಿ (6) ಎಂದು ಗುರುತಿಸಲಾಗಿದೆ, ಚಾರುಮತಿ ಮತ್ತು ಚರಿಷ್ಮಾ ಸಹೋದರಿಯರಾಗಿದ್ದು, ನಾಲ್ವರು ಮಕ್ಕಳು ಒಂದೇ ಗ್ರಾಮಕ್ಕೆ ಸೇರಿದವರಾಗಿದ್ದಾರೆಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಎರಡು ದಿನಗಳ ಹಿಂದೆ ದ್ವಾರಪುಡಿ ಗ್ರಾಮದ ಮಹಿಳಾ ಮಂಡಳಿ ಕಚೇರಿಯ ಬಳಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಕಾರನ್ನು ನಿಲ್ಲಿಸಿದ್ದ. ಕಾರು ಲಾಕ್ ಮಾಡುವುದನ್ನು ಮರೆತಿದ್ದ ಎನ್ನಲಾಗಿದೆ. ಈ ನಡುವೆ ಭಾನುವಾರ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಕಾರಿನೊಳಗೆ ಹೋಗಿದ್ದು, ಕಾರಿನ ಬಾಗಿಲು ಲಾಕಿ ಆಗಿದೆ. ಈ ವೇಳೆ ಮಕ್ಕಳಿಗೆ ಉಸಿರಾಡಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ.
ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ ವಿಜಯನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ (ಜಿಜಿಹೆಚ್) ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ.
ಘಟನೆ ಬಳಿಕ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು, ಮೃತ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ನಡುವೆ ಸ್ಥಳೀಯ ನಿವಾಸಿಗಳ ಮಾಹಿತಿಯ ಮೇರೆಗೆ, ವಿಜಯನಗರ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಕಾರಿನ ಮಾಲೀಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.