LATEST NEWS
ಕೊಚ್ಚಿ – ಟೆಕ್ ಫೆಸ್ಟ್ ವೇಳೆ ಕಾಲ್ತುಳಿತಕ್ಕೆ ನಾಲ್ವರ ಸಾವು 64ಕ್ಕೂ ಅಧಿಕ ಮಂದಿಗೆ ಗಾಯ
ಕೊಚ್ಚಿ ನವೆಂಬರ್ 25: ಕೊಚ್ಚಿಯಲ್ಲಿ ಶನಿವಾರ ನಡೆದ ಟೆಕ್ ಫೆಸ್ಟ್ ವೇಳೆ ನಡೆದ ಕಾಲ್ತುಳಿತದಲ್ಲಿ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಸುಮಾರು 64 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಟೆಕ್ ಫೆಸ್ಟ್ ನಡೆಯುತ್ತಿದ್ದ ವೇಳೆ, ಗಾಯಕಿ ನಿಖಿತಾ ಗಾಂಧಿ ಕ್ಯಾಂಪಸ್‍ನಲ್ಲಿರುವ ಓಪನ್ ಏರ್ ಆಡಿಟೋರಿಯಂನಲ್ಲಿ ಕಾರ್ಯಕ್ರಮ ನೀಡುತ್ತಿದ್ದರು. ಪಾಸ್‍ಗಳನ್ನು ಹೊಂದಿರದವರಿಗೆ ಕಾರ್ಯಕ್ರಮಕ್ಕೆ ಪ್ರವೇಶವನ್ನು ನಿಬರ್ಂಧಿಸಲಾಗಿತ್ತು. ಹೀಗಾಗಿ ವಿದ್ಯಾರ್ಥಿಗಳೆಲ್ಲ ಹೊರಗಡೆ ನಿಂತು ಕಾರ್ಯಕ್ರಮ ವೀಕ್ಷಿಸುತ್ತಿದ್ದರು.
ಸ್ಥಳೀಯ ಮೂಲಗಳ ಪ್ರಕಾರ, ಏಕಾಏಕಿ ಸುರಿದ ಮಳೆಯ ನಂತರ ವಿದ್ಯಾರ್ಥಿಗಳು ಒಳಗೆ ನುಗ್ಗಲು ಪ್ರಯತ್ನಿಸಿದ ನಂತರ ಕಾಲ್ತುಳಿತ ಸಂಭವಿಸಿದೆ. ವಿದ್ಯಾರ್ಥಿಗಳು ಒಂದೆರಡು ಮೆಟ್ಟಿಲುಗಳ ಮೇಲೆ ಬಿದ್ದಿದ್ದರಿಂದ ಕಾಲ್ತುಳಿತಕ್ಕೆ ಕಾರಣವಾಯಿತು. ಗಾಯಗೊಂಡ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.
ಇದಕ್ಕೂ ಮುನ್ನ ಮಾತನಾಡಿದ ಜಿಲ್ಲಾಧಿಕಾರಿ ಎನ್‌ಎಸ್‌ಕೆ ಉಮೇಶ್, ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು 40 ಕ್ಕೂ ಹೆಚ್ಚು ಜನರು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದಾರೆ, ರಾಜ್ಯ ಆರೋಗ್ಯ ಸಚಿವ ವೀಣಾ ಜಾರ್ಜ್ ಅವರು ನೀಡಿದ ಮಾಹಿತಿ ಪ್ರಕಾರ ಇಬ್ಬರು ಪುರುಷ ಮತ್ತು ಇಬ್ಬರು ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದಾರೆ ಎಂದು ಖಚಿತಪಡಿಸಿದ್ದಾರೆ. 64 ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅತಿಯಾದ ಜನಸಂದಣಿಯೇ ಕಾರಣ ಎಂದು ಶಂಕಿಸಲಾಗಿದೆ.