ಕತಾರ್, ಮಾರ್ಚ್ 22 : ತಾಂತ್ರಿಕ ದೋಷದಿಂದ ಕತಾರ್ ರಕ್ಷಣಾ ಸಚಿವಾಲಯಕ್ಕೆ ಸೇರಿದ ಹೆಲಿಕಾಪ್ಟರ್ ಪತನಗೊಂಡು 6 ಮಂದಿ ಸಾವನ್ನಪ್ಪಿ, ಓರ್ವ ನಾಪತ್ತೆಯಾಗಿರುವ ದುರ್ಘಟನೆ ಭಾನುವಾರ ಮುಂಜಾನೆ ಕತಾರ್ನ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಭವಿಸಿದೆ.

ಈ ಕುರಿತು ಕತಾರ್ ರಕ್ಷಣಾ ಸಚಿವಾಲಯ ಅಧಿಕೃತವಾಗಿ ಮಾಹಿತಿ ನೀಡಿದ್ದು, ಅಪಘಾತಕ್ಕೀಡಾದ ಹೆಲಿಕಾಪ್ಟರ್ನಲ್ಲಿ ಒಟ್ಟು 7 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿಸಿದೆ. ಪತನದ ಪರಿಣಾಮವಾಗಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಘಟನೆ ತಿಳಿದ ತಕ್ಷಣವೇ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿ, ಸಮುದ್ರ ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಿವೆ. ನಾಪತ್ತೆಯಾದ ವ್ಯಕ್ತಿಯ ಪತ್ತೆಗೆ ವಿಶೇಷ ತಂಡಗಳನ್ನು ನಿಯೋಜಿಸಲಾಗಿದ್ದು, ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ತಾಂತ್ರಿಕ ದೋಷವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯ ನಿಖರ ಕಾರಣ ತಿಳಿದುಕೊಳ್ಳಲು ತನಿಖೆ ಮುಂದುವರಿದಿದೆ. ಮೃತರ ಗುರುತು ಪತ್ತೆ ಹಾಗೂ ಕುಟುಂಬಗಳಿಗೆ ಮಾಹಿತಿ ನೀಡುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.