UDUPI
ಸರ್ಕಾರ ನೀಡುವ ಸೌಲಭ್ಯಗಳ ಸದುಪಯೋಗ ಅಗತ್ಯ : ಪ್ರಮೋದ್ ಮಧ್ವರಾಜ್
ಸರ್ಕಾರ ನೀಡುವ ಸೌಲಭ್ಯಗಳ ಸದುಪಯೋಗ ಅಗತ್ಯ : ಪ್ರಮೋದ್ ಮಧ್ವರಾಜ್
ಉಡುಪಿ, ಜನವರಿ 11 :ರಾಜ್ಯ ಸರಕಾರದ ಒಟ್ಟು ಆದಾಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ಅವರಿಗೆ ಸಮರ್ಪಕವಾಗಿ ತಲುಪಿಸುವುದು ಸರಕಾರದ ಉದ್ದೇಶವಾಗಿದೆ. ಇದರ ಒಂದು ಭಾಗವಾಗಿ ಪ.ಜಾತಿ ಮತ್ತು ಪ.ಪಂಗಡ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ನೀಡುತ್ತಿರುವುದು.
ಈ ಪ್ರಯೋಜನವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮೀನುಗಾರಿಕೆ, ಯುವಜನಸಬಲೀಕರಣ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಅವರು ಉಡುಪಿ ಜಿಲ್ಲಾ ಲೀಡ್ ಕಾಲೇಜು ಸ.ಪ್ರ.ದ.ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿ ನಡೆದ ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಉಡುಪಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಪದವಿ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.
ಮುಖ್ಯ ಅತಿಥಿಗಳಾದ ಮಂಗಳೂರು ಪ್ರಾದೇಶಿಕ ಕಚೇರಿಯ ಕಾಲೇಜು ಶಿಕ್ಷಣ ಇಲಾಖೆ ಜಂಟಿನಿರ್ದೇಶಕರು ಪ್ರೊ. ಉದಯಶಂಕರ ಹೆಚ್. ಇವರು ಮಾತನಾಡಿ, ವಿದ್ಯಾರ್ಥಿಗಳು ಲ್ಯಾಪ್‍ಟಾಪ್ ಬಳಸುವ ಬಗ್ಗೆ ಸೂಕ್ತ ತಿಳಿವಳಿಕೆಯನ್ನು ಆಯಾಯ ಕಾಲೇಜುಗಳಲ್ಲಿ ನೀಡುವ ವ್ಯವಸ್ಥೆ ಮಾಡಲಾಗುವುದು.
ಇದನ್ನು ಸರಿಯಾಗಿ ತಿಳಿದುಕೊಂಡು ವಿದ್ಯಾರ್ಥಿಗಳು ಲ್ಯಾಪ್‍ಟಾಪನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರು ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ನಳಿನಿ ಪ್ರದೀಪ್ ರಾವ್, ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ತೋನ್ಸೆ ಕಲ್ಯಾಣಪುರ, ತಾಲೂಕು ಪಂಚಾಯತ್ ಸದಸ್ಯ ಶರತ್‍ಕುಮಾರ್, ತಾಲೂಕು ಪಂಚಾಯತ್ ಸದಸ್ಯರು ಧನಂಜಯ ಕುಂದರ್, ತೆಂಕನಿಡಿಯೂರು ಗ್ರಾಮಪಂಚಾಯತ್ ಅಧ್ಯಕ್ಷರು ಜಯಕುಮಾರ್ ಬೆಳ್ಕಳೆ ಉಪಸ್ಥಿತರಿದ್ದರು.