ತಿರುವನಂತಪುರಂ ಅಗಸ್ಟ್ 02: ಶನಿವಾರ ಕೇರಳಾದ್ಯಂತ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಹಾಗೂ ಭೂಕುಸಿತದ ದುರಂತಗಳಿಗೆ ಸಂಬಂಧಿಸಿದಂತೆ ಭಾನುವಾರ (ಆಗಸ್ಟ್ 2, 2026) ರಾಜ್ಯ ಸರ್ಕಾರ ಅಧಿಕೃತ ಮಾಹಿತಿ ನೀಡಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 13 ಜನರು ತೀವ್ರ ಗಾಯಗೊಂಡಿದ್ದು, 8 ಮಂದಿ ಕಾಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯಾದ್ಯಂತ ಪರಿಸ್ಥಿತಿ ಗಂಭೀರವಾಗಿದ್ದು, 5,792 ಜನರನ್ನು 209 ಕಂಟ್ರೋಲ್ ಹಾಗೂ ಪರಿಹಾರ ಶಿಬಿರಗಳಿಗೆ ರಕ್ಷಿಸಿ ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ 27 ಮನೆಗಳು ಸಂಪೂರ್ಣ ನೆಲಸಮಗೊಂಡಿದ್ದು, 196 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಸಂಪೂರ್ಣ ಪರಿಹಾರ ಹಾಗೂ ನೆರವು ನೀಡುವುದಾಗಿ ಸಿಎಂ ಅಭಯ ನೀಡಿದ್ದಾರೆ. ಭಾನುವಾರ ಮಳೆಯ ತೀವ್ರತೆ ಕೊಂಚ ಕಡಿಮೆಯಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸ್ವಯಂಸೇವಾ ಸಂಸ್ಥೆಗಳು ಹಾಗೂ ರಾಜಕೀಯ ಕಾರ್ಯಕರ್ತರು ಈ ಕಾರ್ಯದಲ್ಲಿ ಕೈಜೋಡಿಸಲು ಸರ್ಕಾರ ಕರೆ ನೀಡಿದೆ. ಕಂದಾಯ ಸಚಿವರು ಹಾಗೂ ಜಿಲ್ಲಾಡಳಿತಗಳೊಂದಿಗೆ ಸಿಎಂ ಕಚೇರಿ ಸತತ ಸಂಪರ್ಕದಲ್ಲಿದೆ.

ಆಗಸ್ಟ್ 5 ರವರೆಗೆ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ (IMD) ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ವಯನಾಡ್, ಕಾಸರಗೋಡು ಸೇರಿದಂತೆ 12 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.