LATEST NEWS
ಜಗದೀಶ್ ಕಾರಂತ್ ವಿರುದ್ದ ಕಠಿಣ ಕ್ರಮ – ಗೃಹ ಸಚಿವ ರಾಮಲಿಂಗಾ ರೆಡ್ಡಿ
ಜಗದೀಶ್ ಕಾರಂತ್ ವಿರುದ್ದ ಕಠಿಣ ಕ್ರಮ – ಗೃಹ ಸಚಿವ ರಾಮಲಿಂಗಾ ರೆಡ್ಡಿ
ಮಂಗಳೂರು ಸೆಪ್ಟೆಂಬರ್ 20: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ ಪೆಕ್ಟರ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಜಗದೀಶ್ ಕಾರಂತ್ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ. ಕರ್ತವ್ಯದಲ್ಲಿರುವ ಅಧಿಕಾರಿಯೊಬ್ಬರನ್ನು ನಿಂದಿಸುವುದು ಸರಿಯಲ್ಲ. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಅವರು ಕಿಡಿಕಾರಿದರು .
ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಶೀಘ್ರದಲ್ಲೇ ಪ್ರಕರಣ ಭೇದಿಸುವ ವಿಶ್ವಾಸವಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪುರಾವೆಗಳು ಸಿಕ್ಕಿವೆ ಅದನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಅವರು ಹೇಳಿದರು. ಗೌರಿ ಲಂಕೇಶ್ ಹಾಗೂ ಸಾಹಿತಿ ಎಂ.ಎಂ ಕಲ್ಬುರ್ಗಿ ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದು ತನಿಖಾಧಿಕಾರಿಗಳ ತಂಡ ಶೀಘ್ರ ಭೇದಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಬಿಜೆಪಿ ಮುಖಂಡರ ಫೋನ್ ಕದ್ದಾಲಿಕೆ ಮಾಡಿದೆ ಎಂದು ಆರೋಪ ಮಾಡಲಾಗುತ್ತಿದೆ.
ಬಿಜೆಪಿ ಮುಂದೆ ಅಧಿಕಾರಕ್ಕೆ ಬರುವುದಿಲ್ಲ ಹಾಗಾಗಿ ಫೋನ್ ಕದ್ದಾಲಿಕೆ ಮಾಡುವ ಅವಶ್ಯಕತೆಯೇ ಇಲ್ಲ ಎಂದು ಅವರು ವ್ಯಂಗ್ಯವಾಡಿದರು. ಫೋನ್ ಕದ್ದಾಲಿಕೆ ಅಗತ್ಯ ಕಾಂಗ್ರೆಸ್ ಗೆ ಇಲ್ಲ ಆ ಕೆಲಸ ಏನಿದ್ದರೂ ಬಿಜೆಪಿಯವರದು. ಈ ಹಿನ್ನೆಲೆಯಲ್ಲಿ ತನಿಖೆಯ ಅವಶ್ಯಕತೆ ಇಲ್ಲ ಎಂದವರು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ನಿಗೂಢ ಸಾವಿನ ಪ್ರಕರಣದ ತನಿಖೆ ಪೂರ್ಣಗೊಂಡಿದೆ .ಪ್ರಕರಣದ ನೈಜ ವಿಷಯ ಶೀಘ್ರದಲ್ಲಿಯೇ ಹೊರ ಬರಲಿದೆ ಎಂದು ಅವರು ತಿಳಿಸಿದರು.