LATEST NEWS
ತಪ್ಪು ಹೇಳಿಕೆಯಿಂದಾಗಿ ಮಾಧ್ಯಮಗಳು ಹಲ್ಲೆ ಪ್ರಕರಣದ ಬಗ್ಗೆ ಚರ್ಚೆ ನಡೆಸುತ್ತಿವೆ – ಅಮಿತ್ ಶಾ

ತಪ್ಪು ಹೇಳಿಕೆಯಿಂದಾಗಿ ಮಾಧ್ಯಮಗಳು ಹಲ್ಲೆ ಪ್ರಕರಣದ ಬಗ್ಗೆ ಚರ್ಚೆ ನಡೆಸುತ್ತಿವೆ – ಅಮಿತ್ ಶಾ
ಮಂಗಳೂರು ಫೆಬ್ರವರಿ 20: ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ನಿಂದ ಮಾರಣಾಂತಿಕ ಹಲ್ಲೆಗೊಳಗಾದ ವಿದ್ವತ್ ನಮ್ಮ ಪಕ್ಷದ ಕಾರ್ಯಕರ್ತ ಅಲ್ಲ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ.
ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಸಮೀಪದ ಕುಲ್ಕುಂದದಲ್ಲಿ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಹ್ಯಾರಿಸ್ ಅವರ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ನಮ್ಮ ಪಕ್ಷದ ಕಾರ್ಯಕರ್ತ ಎಂದು ಹೇಳಿಕೆ ನೀಡಿದ್ದರು.

ನಂತರ ಸುರತ್ಕಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ ವಿದ್ವತ್ ನಮ್ಮ ಪಕ್ಷದ ಕಾರ್ಯಕರ್ತನಲ್ಲ ಎಂದು ಸ್ಪಷ್ಟಪಡಿಸಿದರು. ಆದರೂ ನನ್ನ ತಪ್ಪು ಹೇಳಿಕೆಯಿಂದಾಗಿ ಹಲ್ಲೆಯ ವಿಷಯ ಈಗ ಮಾಧ್ಯಮಗಳಲ್ಲಿ ಚರ್ಚೆಯ ವಿಷಯವಾಗಿದೆ. ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಿದರೆ ಭಯ ಇದ್ದರೂ ಕೂಡ ಹಲ್ಲೆ ವಿಷಯವನ್ನು ಮಾಧ್ಯಮಗಳು ಗಂಭೀರವಾಗಿ ಚರ್ಚೆಗೆ ತೆಗೆದುಕೊಂಡಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಇತ್ತೀಚೆಗೆ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತರ ದೀಪಕ್ ಅವರ ಮನೆ ಭೇಟಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ , ನಾನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷನಾಗಿದ್ದು ನನ್ನ ಕಾರ್ಯಕರ್ತರ ಮನೆಗೆ ತೆರಳಿ ಅವರ ಕುಟುಂಬಕ್ಕೆ ಸಾಂತ್ವಾನ ಹೇಳುವುದು ನನ್ನ ಜವಬ್ದಾರಿ ಎಂದು ಹೇಳಿದರು. ಆದರೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿಯವರೆಗೆ ಕೊಲೆಯಾದ ಬಿಜೆಪಿ ಹಾಗೂ ಹಿಂದೂ ಸಂಘಟನೆಯ 22 ಮಂದಿ ಮನೆಗೆ ಹೋಗಿಲ್ಲ, ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ದೀಪಕ್ ಮನೆಗೆ ತೆರಳಿ ಸಾಂತ್ವಾನ ಹೇಳಿದ್ದಾರೆ ಎಂದು ಆರೋಪಿಸಿದರು.