KARNATAKA
ರಾಜಕೀಯ ನಿವೃತ್ತಿಯತ್ತ ಕಾರವಾರ ಸಂಸದ ಅನಂತ ಕುಮಾರ್ ಹೆಗಡೆ
ಕಾರವಾರ : ಸದಾ ತನ್ನ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುತ್ತಿದ್ದ ಕಾರವಾರ ಸಂಸದ ಅನಂತ ಕುಮಾರ್ ಹೆಗಡೆ ಸದ್ಯ ರಾಜಕೀಯ ನಿವೃತ್ತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವಿನಿಂದ ನರಳುತ್ತಿರುವ ಅವರು ಈ ಹಿನ್ನಲೆ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಲಿದ್ದಾರೆ ಎಂದು ಸುದ್ದಿಯಾಗಿದೆ.
ಫೆಬ್ರವರಿ 27 ರಂದು ಮಂಗಳೂರಿನಲ್ಲಿ ಮೊಣಕಾಲಿನ ಚಿಕಿತ್ಸೆಗೆ ಒಳಗಾಗಿರುವ ಸಂಸದ ಅನಂತ ಕುಮಾರ್ ಹೆಗಡೆ ಮಂಗಳೂರಿನಿಂದ ದೆಹಲಿಗೆ ತೆರಳಿದ್ದು ,ಅಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಅನಂತ ಕುಮಾರ್ ಹೆಗಡೆಯವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದಾರೆ. ಇದೇ ಕಾರಣದಿಂದಾಗಿ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಅದಾಗಿಯೂ ಕಳೆದ ಲೋಕಸಭಾ ಚುನಾವಣೆಯ ನಂತರದಿಂದ ಹೆಚ್ಚಿನ ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರವಿರುತ್ತಿದ್ದರು.
ಇತ್ತೀಚೆಗೆ ಕೆಲವು ತಿಂಗಳಿಂದ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ, ತಜ್ಞರು ತಕ್ಷಣವೇ ಸೂಕ್ತ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ತಿಳಿಸಿದ್ದರು.
ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಹಾಗೂ ವೈದ್ಯರು ದೀರ್ಘಾವಧಿಯ ವಿಶ್ರಾಂತಿಯನ್ನು ಪಡೆಯುಲು ಸೂಚಿಸಿರುವ ಹಿನ್ನೆಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವವರೆಗೆ ಕೆಲವು ಕಾಲ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.