Connect with us

KARNATAKA

ಪುನೀತ್‌ ಕೆರೆಹಳ್ಳಿ ಹಾಗೂ ಸಹಚರರಿಗೆ ಜಾಮೀನು

ಬೆಂಗಳೂರು, ಮೇ 17: ಜಾನುವಾರು ಸಾಗಣೆ ಸಂದರ್ಭದಲ್ಲಿ ಇದ್ರೀಷ್‌ ಪಾಷ (45) ಎಂಬುವವರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕುಮಾರ್‌ ಅಲಿಯಾಸ್‌ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರು ಆರೋಪಿಗಳಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಕುರಿತಂತೆ ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಮೂರು ಅರ್ಜಿಗಳನ್ನು ರಜಾಕಾಲದ ಪೀಠದಲ್ಲಿದ್ದ ನ್ಯಾಯಮೂರ್ತಿ ಎಂ. ಜಿ. ಉಮಾ ಅವರು ಮಂಗಳವಾರ ವಿಚಾರಣೆ ನಡೆಸಿ, ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ, ಗೋಪಿ, ಸುರೇಶ್, ಎ.ಎನ್‌. ಪವನ್ ಕುಮಾರ್, ಪಿ. ಲಿಂಗಪ್ಪ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌, ‘ಮರಣೋತ್ತರ ಪರೀಕ್ಷೆಯಲ್ಲಿ ಇದ್ರೀಷ್‌ ಪಾಷ ದೇಹದಲ್ಲಿ ತರಚಿದ ಗಾಯಗಳ ಬಗ್ಗೆ ಮಾತ್ರ ಉಲ್ಲೇಖವಿದೆ. ಗಂಭೀರ ಗಾಯಗಳ ಬಗ್ಗೆ ಯಾವ ಮಾಹಿತಿಯೂ ಇಲ್ಲ. ಪ್ರಕರಣವು ಸಾತನೂರು ಠಾಣೆಯ 100 ಮೀಟರ್ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕಿದ್ದು ಜಾಮೀನು ಮಂಜೂರು ಮಾಡಬೇಕು‘ ಎಂದು ಕೋರಿದರು. ನ್ಯಾಯಪೀಠ ಈ ವಾದಾಂಶವನ್ನು ಪುರಸ್ಕರಿಸಿದೆ.

ಪ್ರಕರಣವೇನು?

‘ಪುನೀತ್ ಕೆರೆಹಳ್ಳಿ ಹಾಗೂ ಆತನ ಸಹಚರರು 2022ರ ಮಾರ್ಚ್ 31ರಂದು ಮಂಡ್ಯದ ಕಡೆಯಿಂದ ಬರುತ್ತಿದ್ದ ಜಾನುವಾರು ಸಾಗಣೆ ವಾಹನವೊಂದನ್ನು ಸಾತನೂರು ಪೊಲೀಸ್‌ ಠಾಣೆ ಸಮೀಪ ಅಡ್ಡಗಟ್ಟಿ ವಾಹನದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದರು’ ಎಂದು ಆರೋಪಿಸಲಾಗಿತ್ತು.

ಏಪ್ರಿಲ್ 1ರಂದು ಬೆಳಗ್ಗೆ ಘಟನಾ ಸ್ಥಳದಿಂದ ಅಂದರೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿ ಇದ್ರೀಷ್ ಪಾಷ ಶವ ಪತ್ತೆಯಾಗಿತ್ತು. ‘ಪುನೀತ್ ಮತ್ತು ಸಹಚರರಿಂದ ಪಾಷ ಮೇಲೆ ಹಲ್ಲೆ ನಡೆದಿದೆ’ ಎಂದು ಆರೋಪಿಸಿ ಇದ್ರೀಷ್‌ ಪಾಷ ಅವರ ಸಹೋದರ ಯೂನುಸ್ ಪಾಷ ದೂರು ನೀಡಿದ್ದರು. ಇದನ್ನು ಆಧರಿಸಿ ಆರೋಪಿಗಳ ವಿರುದ್ಧ ಸಾತನೂರು ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 302, 324, 341, 504, 506 ಜೊತೆಗೆ 34 ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ರಾಜಸ್ಥಾನದ ಬಾಂಸ್‌ವಾಡಾ ಬಳಿಯ ರಾಮನಗರ ಎಂಬಲ್ಲಿ ಪೊಲೀಸರು ಏಪ್ರಿಲ್ 5ರಂದು
ಬಂಧಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *