ಬೆಳ್ತಂಗಡಿ ಮೇ 05: ಬೆಳಾಲು ಪೇಟೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನಕ್ಕೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಮೃತಪಟ್ಟವರು. ಇವರು ಬೆಳಾಲು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು.

ಮಂಗಳವಾರದಂದು ಜಯ ಮೇಸ್ತ್ರಿ ಅವರು ತಮ್ಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ, ಹಿಂಭಾಗದಿಂದ ಬಂದ ಕ್ರೇನ್ ವಾಹನವು ಬೆಳಾಲು ಪೇಟೆಯ ಬಳಿ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸವಾರ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.