BELTHANGADI
ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ನಿಧನ
ಬೆಳ್ತಂಗಡಿ ಮೇ 08: ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರು ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿದ್ದ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ.
ಇತ್ತೀಚೆಗೆ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದ ಕಾರಣ ಇಂದು ಮೃತ ಹೊಂದಿರು ಮಾಹಿತಿ ದೊರಕಿದೆ. ಮೇ.9 ರಂದು ಮುಂಜಾನೆ ಪಾರ್ಥೀವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ.
ಕುವೆಟ್ಟು ಗ್ರಾಮದ. ಕೇದೆ ಸುಬ್ಬ ಪೂಜಾರಿ ಮತ್ತು ದೇವಕಿ ದಂಪತಿಯ ಪುತ್ರರಾಗಿರುವ ಬಂಗೇರರು 15 ಜನವರಿ 1946ರಂದು ಜನಿಸಿದ್ದರು. 1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್‌ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 1983 ರಲ್ಲಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾಯಿತರಾಗಿ ಪ್ರಥಮ ಬಾರಿಗೆ ವಿಧಾನ ಸಭೆಯನ್ನು ಪ್ರವೇಶಿಸಿದ್ದರು.
ಬೆಳ್ತಂಗಡಿ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ರಾಜ್ಯ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತು, ಗೆಲವು ಸಾಧಿಸಿ ವಿಶಿಷ್ಟ ದಾಖಲೆಯನ್ನು ಬರೆದಿದ್ದಾರೆ. ಕಾಂಗ್ರೇಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲೂ ಚುನಾವಣೆಗೆ ಸ್ಪರ್ಧಿಸಿ ಗೆಲುವನ್ನು ಸಾಧಿಸಿದ್ದಾರೆ.