KARNATAKA
ಪಕ್ಷದಿಂದ ಬಂಡಾಯ – ಬಿಜೆಪಿಯಿಂದ ಈಶ್ವರಪ್ಪ ಅವರಿಗೆ ಗೇಟ್ ಪಾಸ್
ಬೆಂಗಳೂರು ಎಪ್ರಿಲ್ 22 : ಬಿಎಸ್ ಯಡಿಯೂರಪ್ಪ ವಿರುದ್ದ ತೊಡೆತಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ನಿಂತಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿದೆ.
ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕಡೆಯ ದಿನವಾಗಿತ್ತು. ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ ಅವರು ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ. ‘ಪಕ್ಷದ ಸೂಚನೆಯನ್ನು ಕಡೆಗಣಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ’ ಎಂದು ಅವರು ಹೇಳಿದ್ದಾರೆ.
ತಮ್ಮ ಪುತ್ರನಿಗೆ ಹಾವೇರಿ ಕ್ಷೇತ್ರದಿಂದ ಟಿಕೆಟ್ ನೀಡಲಿಲ್ಲ ಎಂದು ಮುನಿಸಿಕೊಂಡ ಈಶ್ವರಪ್ಪ, ಶಿವಮೊಗ್ಗ ಕ್ಷೇತ್ರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ತಮಗೆ ಟಿಕೆಟ್ ಸಿಗದೇ ಇರುವುದಕ್ಕೆ ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರೇ ಕಾರಣ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.