LATEST NEWS
ಉಡುಪಿ – ಕಾಂಗ್ರೇಸ್ ಕಚೇರಿಗೆ ನುಗ್ಗಲು ಯತ್ನ – ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಉಡುಪಿ ಫೆಬ್ರವರಿ 28: ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಬೆಂಬಲಿಗರು ʼಪಾಕಿಸ್ತಾನ್ ಝಿಂದಾಬಾದ್ʼ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದಾರೆ. ಉಡುಪಿಯಲ್ಲೂ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಂಗ್ರೇಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದ್ದು, ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಾಸಿರ್ ಹುಸೇನ್ ಅವರ ಬೆಂಬಲಿಗರು ʼಪಾಕಿಸ್ತಾನ್ ಝಿಂದಾಬಾದ್ʼ ಘೋಷಣೆ ಕೂಗಿದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಇದೀಗ ಕಾಂಗ್ರೇಸ್ ವಿರುದ್ದ ತಿರುಗಿ ಬಿದ್ದಿದೆ. ಇಡೀ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇಂದು ಉಡುಪಿಯಲ್ಲೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ನಡುವೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬರುತ್ತಾರೆ ಎಂದು ಕಾಂಗ್ರೇಸ್ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಮುಂದೆ ಸಾಲಾಗಿ ಕುರ್ಚಿ ಹಾಕಿ ಕುಳಿತಿದ್ದರು.
ಬ್ರಹ್ಮಗಿರಿ ಸರ್ಕಲ್ ಬಳಿ ಇರುವ ಕಚೇರಿಗೆ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದಾರೆ. ಆದರೆ ಕಾರ್ಯಕರ್ತರನ್ನು ಬ್ರಹ್ಮಗಿರಿ ಸರ್ಕಲ್ ನಲ್ಲಿ ಪೊಲೀಸರು ತಡೆದಿದ್ದಾರೆ. ಬ್ಯಾರಿಕೇಡ್ ಅಳವಡಿಸುವ ಮೂಲಕ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಬಿಜೆಪಿಯ ಪ್ರಮುಖ ನಾಯಕರನ್ನು ವಶಕ್ಕೆ ಪಡೆದರು. ಉಡುಪಿ ಶಾಸಕ ಯಶಪಾಲ್ ಸುವರ್ಣ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ವಿಕ್ಯಾತ್ ಶೆಟ್ಟಿ, ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.