LATEST NEWS
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಮಿಷನರ್ ನೂರ್ ಝಹರಾ ಖಾನಂ ವಿರುದ್ಧ ವಾಮಾಚಾರಕ್ಕೆ ಮುಂದಾದ ಬ್ರೋಕರ್ ಗಳು

ಮಂಗಳೂರು ಏಪ್ರಿಲ್ 2: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಪ್ರಾಧಿಕಾರದ ಆಯುಕ್ತರು ಬ್ರೋಕರ್ ವಿರುದ್ದ ಕಠಿಣ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಬ್ರೋಕರ್ ಗಳು ಸೇರಿ ಆಯುಕ್ತರ ವಿರುದ್ದವೇ ವಾಮಾಚಾರಕ್ಕೆ ಮುಂದಾದ ಘಟನೆ ನಡೆದಿದ್ದು, ಬ್ರೋಕರ್ಗಳ ಅಟ್ಟಹಾಸದಿಂದ ಕಂಗಾಲಾದ ಮುಡಾ ಆಯುಕ್ತೆ ನೂರ್ ಝಹರಾ ಖಾನಂ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಮುಡಾ ಕಚೇರಿಗೆ ದಲ್ಲಾಳಿಗಳನ್ನು ನಿರ್ಬಂಧಿಸಿದ್ದಕ್ಕೆ ಕಮಿಷನರ್ ಮೇಲೆ ವಾಮಾಚಾರ ಪ್ರಯೋಗದ ಬೆದರಿಕೆಯೊಡ್ಡಲಾಗಿದೆ. ಈ ಬಗ್ಗೆ ಅವರು ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಇಬ್ಬರು ದಲ್ಲಾಳಿಗಳ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.

ಬ್ರೋಕರ್ ವಹಾಬ್ (45) ಮತ್ತು ಅಸಿಸ್ಟೆಂಟ್ ಬ್ರೋಕರ್ ಸಾಬಿತ್ (25) ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ. ಮೌಢ್ಯ ನಿರ್ಬಂಧ ಕಾಯ್ದೆ 2020ರ ಅಡಿಯಲ್ಲೇ ಕೇಸು ದಾಖಲಿಸಬೇಕೆಂದು ಕಮಿಷನರ್ ದೂರು ನೀಡಿದ್ದರು. ಸದ್ಯ ಬಿಎನ್ಎಸ್ ಸೆಕ್ಷನ್ 132, 351, 356(1), 61(2), 352 ರಡಿ ಎಫ್ಐಆರ್ ದಾಖಲಿಸಿರುವ ಉರ್ವಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದಲ್ಲಾಳಿಗಳು ಒಟ್ಟು ಸೇರಿ ವಾಟ್ಸ್ಆ್ಯಪ್ ಗ್ರೂಪ್ ರಚಿಸಿ ಅದರಲ್ಲಿ ಪ್ರಾಣ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಅವಮಾನಕರ ಸಂದೇಶಗಳನ್ನು ಪ್ರಕಟಿಸಿದ್ದಾರೆ ಎಂದು ಕಮಿಷನರ್ ನೂರ್ ಝಹರಾ ಖಾನಂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇಷ್ಟೇ ಅಲ್ಲದೆ, ದೂರವಾಣಿ ಮೂಲಕವೂ ಜೀವಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದಾರೆ.