ಮೈಸೂರು,ಮಾರ್ಚ್ 28: ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕರಲ್ಲಿ ತೀವ್ರ ಭೀತಿ ಮೂಡಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ.

ಬಂಧಿತ ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಈತ ಮೈಸೂರಿನ ಪ್ರತಿಷ್ಠಿತ ಬೃಂದಾವನ ಬಡಾವಣೆಯಲ್ಲಿ ಅಡಗಿಕೊಂಡಿದ್ದ ಎನ್ನಲಾಗಿದೆ.
ಆರೋಪಿಯು ಕೇವಲ ಒಂದು ತಿಂಗಳ ಅವಧಿಯಲ್ಲಿ ಸರಣಿ ಇ-ಮೇಲ್ ಕಳುಹಿಸುವ ಮೂಲಕ ವ್ಯವಸ್ಥಿತವಾಗಿ ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಶಿಕ್ಷಣ ಸಂಸ್ಥೆಗಳಿಗೆ ಬೆದರಿಕೆ ಒಡ್ಡುತ್ತಿದ್ದ. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದ ದೆಹಲಿ ಪೊಲೀಸರು, ತಾಂತ್ರಿಕ ವಿಶ್ಲೇಷಣೆಯ ಆಧಾರದ ಮೇಲೆ ಆರೋಪಿಯ ಇರುವಿಕೆಯನ್ನು ಪತ್ತೆಹಚ್ಚಿದ್ದರು. ಮೈಸೂರಿನ ಬೃಂದಾವನ ಬಡಾವಣೆ 2ನೇ ಹಂತದ, 6ನೇ ಕ್ರಾಸ್ನಲ್ಲಿರುವ ಮನೆಯೊಂದರ ಮೇಲೆ ದೆಹಲಿ ಪೊಲೀಸರು ಹಾಗೂ ಸ್ಥಳೀಯ ವಿ.ವಿ. ಪುರಂ ಪೊಲೀಸ್ ಠಾಣೆಯ ಸಿಬ್ಬಂದಿ ಜಂಟಿಯಾಗಿ ದಿಢೀರ್ ದಾಳಿ ನಡೆಸಿ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ.
ಬಂಧನದ ವೇಳೆ ಆರೋಪಿಯ ಬಳಿಯಿದ್ದ ಒಂದು ಲ್ಯಾಪ್ಟಾಪ್ ಹಾಗೂ ಹಲವಾರು ಸಿಮ್ ಕಾರ್ಡ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಎಲೆಕ್ಟ್ರಾನಿಕ್ ಉಪಕರಣಗಳ ಮೂಲಕವೇ ಆತ ಇ-ಮೇಲ್ ಕಳುಹಿಸುತ್ತಿದ್ದ ಎನ್ನಲಾಗಿದ್ದು, ಇವುಗಳನ್ನು ಹೆಚ್ಚಿನ ತಾಂತ್ರಿಕ ಪರಿಶೀಲನೆಗೆ ಒಳಪಡಿಸಲಾಗಿದೆ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿ ಪೊಲೀಸರು ತಮ್ಮ ವಶಕ್ಕೆ ಪಡೆದು ದೆಹಲಿಗೆ ಕರೆದೊಯ್ಯುತ್ತಿದ್ದಾರೆ.
ಇತ್ತೀಚೆಗಷ್ಟೇ ಮೈಸೂರಿನಲ್ಲಿ ಅಂತಾರಾಜ್ಯ ಡ್ರಗ್ಸ್ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದರು. ಅದರ ಬೆನ್ನಲ್ಲೇ ಈಗ ಬಾಂಬ್ ಬೆದರಿಕೆ ಹಾಕುತ್ತಿದ್ದ ಆರೋಪಿಯೂ ಸಹ ನಗರದ ಪ್ರತಿಷ್ಠಿತ ಬಡಾವಣೆಯಲ್ಲೇ ಆಶ್ರಯ ಪಡೆದಿದ್ದುದು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಆರೋಪಿಯ ಸಂಪರ್ಕ ಜಾಲ ಹಾಗೂ ಈ ಕೃತ್ಯದ ಹಿಂದಿರುವ ನೈಜ ಉದ್ದೇಶಗಳ ಬಗ್ಗೆ ದೆಹಲಿಯಲ್ಲಿ ನಡೆಯುವ ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.