KARNATAKA
ಕೊರೊನಾ ಲಸಿಕೆ ನೀಡಲು ಆರಂಭ…! ಆರೋಗ್ಯ ಕಾರ್ಯಕರ್ತರಿಗೆ ಮೊದಲ ಹಂತದ ಲಸಿಕೆ
ಬೆಂಗಳೂರು, ಅಕ್ಟೋಬರ್ 20: ನಾಡಿನ ಜನತೆಗೆ ಶುಭ ಸುದ್ದಿ ದೊರೆತಿದೆ. ಕೊರೊನಾ ಲಸಿಕೆ ನೀಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗಳು ಮತ್ತು ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಹೇಳಲಾಗಿದೆ.
ಈ ಬಗ್ಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರಾದ ಡಾ. ಅರುಂಧತಿ ಚಂದ್ರಶೇಖರ್ ಸೋಮವಾರ ಪತ್ರ ಬರೆದಿದ್ದು ಆರೋಗ್ಯ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ಸಮಗ್ರ ಮಾಹಿತಿ ಸಲ್ಲಿಸಲು ಸೂಚಿಸಿದ್ದಾರೆ.
ಈ ಮೊದಲ ಹಂತದ ಅಭಿಯಾನದಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಮೇಲುಸ್ತುವಾರಿಯಾಗಿ ನಿಯೋಜಿತರಾಗಲಿದ್ದಾರೆ. ಜಿಲ್ಲೆಯಲ್ಲಿರುವ ಆರೋಗ್ಯ ಸಂಸ್ಥೆಗಳ ವಿವರ, ಕೆಲಸ ನಿರ್ವಹಿಸುವ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಮಾಹಿತಿಯನ್ನು ಕೇಂದ್ರ ಸರ್ಕಾರದ ಕೋವಿಡ್-19 ವ್ಯಾಕ್ಸಿನೇಷನ್ ಬೇನಿಫಿಷೇರಿ ಮ್ಯಾನೇಜ್ಮೆಂಟ್ ಸಿಸ್ಟಮ್ ನಲ್ಲಿ ಅಪ್ಲೋಡ್ ಮಾಡುವಂತೆ ತಿಳಿಸಲಾಗಿದೆ.
ಅಕ್ಟೋಬರ್ 31 ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ. ಆರೋಗ್ಯ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಕಾರ್ಯಕರ್ತರಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಭಾನುವಾರ ನಡೆದಿದ್ದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವರಾದ ಡಾ. ಹರ್ಷ ವರ್ಧನ್ ಅವರು ದೇಶದಲ್ಲಿ ಕೋರೊನಾ ಲಸಿಕೆಯನ್ನು ನೀಡುವ ಪ್ರಕ್ರೀಯೆ ಶೀಘ್ರದಲ್ಲೇ ಆರಂಭಿಸಲಾಗುವುದು ಎಂಬ ಸುಳಿವು ನೀಡಿದ್ದರು