ಮಾರ್ಕಪುರಂ ಮಾರ್ಚ್ 26: ಆಂಧ್ರಪ್ರದೇಶದ ಮಾರ್ಕಪುರಂ ಸಮೀಪ ಗುರುವಾರ ಮುಂಜಾನೆ ಖಾಸಗಿ ಬಸ್ ಮತ್ತು ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 13ಕ್ಕೂ ಅಧಿಕ ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸಜೀವ ದಹನವಾಗಿದ್ದಾರೆ.

ತೆಲಂಗಾಣದ ಜಗಿತ್ಯಾಲ್ನಿಂದ ನೆಲ್ಲೂರು ಜಿಲ್ಲೆಯ ಕಲಿಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಒಟ್ಟು 37 ಪ್ರಯಾಣಿಕರಿದ್ದರು. ಮಾರ್ಕಪುರಂ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಟಿಪ್ಪರ್ ಟ್ರಕ್ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಬೆನ್ನಲ್ಲೇ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಆವರಿಸಿತು. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ 23 ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿವೆ.
ಘಟನೆಯ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಕೂಡಲೇ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಅಪಘಾತದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತದೇಹಗಳ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿ. ಹರ್ಷವರ್ಧನ್ ರಾಜು ತಿಳಿಸಿದ್ದಾರೆ.