LATEST NEWS
ಮಂಗಳೂರು ಗಲಭೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್
ಮಂಗಳೂರು ಗಲಭೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಮಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದ 21 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದೆ.
2019ರ ಡಿಸೆಂಬರ್ 19 ರಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ಹಿಂಸಾಚಾರ ನಡೆದು ಮಂಗಳೂರಿನಲ್ಲಿ ಗೋಲಿಬಾರ್ ಆಗಿತ್ತು, ಈ ಗೋಲಿಬಾರ್ ನಲ್ಲಿ ಇಬ್ಬರು ಮೃತಪಟ್ಟಿದ್ದರು.
ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು. ಆದರೆ ಆರೋಪಿಗಳ ಬಂಧನ ಮಾಡುವಾಗ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ. ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿರುವುದಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಒದಗಿಸದ್ದಕ್ಕೆ ಇರುವ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಎಲ್ಲ 21 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ ಸಾಕ್ಷ್ಯ ಎಂದು ಪರಿಗಣಿಸಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೈ ಕೋರ್ಟ್ ಏಕ ಸದಸ್ಯ ಪೀಠ ಅಭಿಪ್ರಾಯ ಪಟ್ಟು ಜಾಮೀನು ಮಂಜೂರು ಮಾಡಿತ್ತು.
ಈ ಜಾಮೀನು ಅರ್ಜಿಯನ್ನು ಪೊಲೀಸರು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ರಾಜ್ಯದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆರೋಪಿಗಳು ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎನ್ನುವುದಕ್ಕೆ ಪುರಾವೆಗಳಿವೆ ಎಂದು ಸುಪ್ರೀಂಕೋರ್ಟ್ ತಿಳಿಸಿದರು. ಹೀಗೆ ವಾದ ಮಂಡಿಸುತ್ತಿದ್ದಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ನ್ಯಾ.ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಹೈ ಕೋರ್ಟ್ ಆದೇಶಕ್ಕೆ ತಡೆ ನೀಡಿ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿದರು.
ಮಹಮ್ಮದ್ ಅಶಿಕ್, ಮಹಮ್ಮದ್ ಸುಹಾಲ್, ನಾಸಿರುದ್ದೀನ್, ಮಹಮ್ಮದ್ ಶಾಕೀರ್, ಕಲಂದರ್ ಬಾಷಾ, ಮಹಮ್ಮದ್ ಅಜರ್ ಸೇರಿದಂತೆ 21 ಆರೋಪಿಗಳ ಜಾಮೀನು ರದ್ದುಗೊಂಡಿದೆ.