ವಿಜಯಪುರ, ಮಾರ್ಚ್ 13: ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ನಿವಾಸಿಗಳಾದ ಚಂದ್ರವ್ವ ಟಕ್ಕೆನ್ನವರ (70) ಮತ್ತು ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ನಾಲ್ವರು ಕಾಗವಾಡದಿಂದ ಆಂಧ್ರ ಪ್ರದೇಶದ ಶ್ರೀಶೈಲ ಕ್ಷೇತ್ರಕ್ಕೆ ಯಾತ್ರೆ ಕೈಗೊಂಡಿದ್ದರು. ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಸಮೀಪ ಕಾರಿನ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ಪಲ್ಟಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದು ಬಸವನಬಾಗೇವಾಡಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.