ಶ್ರೀನಗರ, ಮಾರ್ಚ್ 4: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ದಾರಿತಪ್ಪಿಸುವ ವಿಷಯ ಹಂಚಿಕೊಂಡ ಆರೋಪದ ಮೇಲೆ ಶ್ರೀನಗರ ಸಂಸದ Aga Syed Ruhullah Mehdi ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಅಮೆರಿಕ–ಇಸ್ರೇಲ್ ಜಂಟಿ ದಾಳಿಯಲ್ಲಿ Ali Khamenei ಹತ್ಯೆಯಾಗಿದ್ದಾರೆಂಬ ವಿಷಯದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಸಂಸದರು ತೀವ್ರವಾಗಿ ಟೀಕಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ಕೆಲವು ಪೋಸ್ಟ್‌ಗಳು ಸಾರ್ವಜನಿಕರಲ್ಲಿ ಭಯ ಮತ್ತು ಗೊಂದಲ ಸೃಷ್ಟಿಸುವಂತಿವೆ ಎಂಬ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಪ್ರಕರಣದಲ್ಲಿ ಶ್ರೀನಗರದ ಮಾಜಿ ಮೇಯರ್ Junaid Azim Mattu ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸುಳ್ಳು, ಕೃತಕ ಹಾಗೂ ದಾರಿತಪ್ಪಿಸುವ ಮಾಹಿತಿಯನ್ನು ಹಂಚಿ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುವ ಪ್ರಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.

ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿ ಜಾಲದ ವಿರುದ್ಧ ಜಮ್ಮು–ಕಾಶ್ಮೀರ ಪೊಲೀಸರು ವ್ಯಾಪಕ ಕಾರ್ಯಾಚರಣೆ ಆರಂಭಿಸಿದ್ದು, ಹಲವು ಮಾಧ್ಯಮ ಸಂಸ್ಥೆಗಳು ಹಾಗೂ ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಅಲ್ಲದೆ, ಶ್ರೀನಗರದ ಮೂರು ಪ್ರಮುಖ ಪತ್ರಿಕೆಗಳ ಫೇಸ್‌ಬುಕ್ ಪುಟಗಳನ್ನು ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ. ಪ್ರಕರಣದ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

Share Information