LATEST NEWS
ಇಂದಿನಿಂದ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ನಿಷೇಧ

ಚಿಕ್ಕಮಗಳೂರು ಜುಲೈ 9: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಇಂದಿನಿಂದ ಸಂಜೆ 7 ರಿಂದ ಬೆಳಿಗ್ಗೆ 7 ಗಂಟೆವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶಿಸಿದ್ದಾರೆ.
ಈಗಾಗಲೇ ಜಿಲ್ಲೆಯಲ್ಲಿ ಬಾರಿ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟ್ ಪ್ರದೇಶಗಳಲ್ಲಿ ಅತೀ ಹೆಚ್ಚು ಮಳೆಯಾಗುತ್ತಿದೆ. ಈ ಹಿನ್ನಲೆ ಮುಂಜಾಗ್ರತೆಯಾಗಿ ಈ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶದಲ್ಲಿ ತಿಳಿಸಿದ್ದಾರೆ.
ಈಗಾಗಲೇ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಜುಲೈ 9 ಮತ್ತು 10ರಂದು ಅರೆಂಜ್ ಅಲರ್ಟ್ ಘೋಷಿಸಿದೆ. ಇನ್ನೊಂದೆಡೆ ಚಾರ್ಮಾಡಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರಗಳು ಉರುಳಿ ಬೀಳುವ ಹಾಗೂ ಭೂ ಕುಸಿತವಾಗುವ ಸಂಭವನೆಗಳು ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಮುಂದಿನ ಆದೇಶ ಬರುವವರೆಗೂ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು- ತುಮಕೂರು ರಸ್ತೆಯ ಚಾರ್ಮಾಡಿ ಘಾಟಿ ಚಿಕ್ಕಮಗಳೂರು ಜಿಲ್ಲಾ ಗಡಿಯಿಂದ ಕೊಟ್ಟಿಗೆಹಾರವರೆಗೆ ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 7ರ ವರೆಗೆ ಯಾವುದೇ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಗೌತಮ್ ಆದೇಶ ಹೊರಡಿಸಿದ್ದಾರೆ.