ಚಾರ್ಮಾಡಿ ಏಪ್ರಿಲ್ 26: ಚಾರ್ಮಾಡಿ ಘಾಟಿಯ 8ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಶೋಕ್ ಲೈಲ್ಯಾಂಡ್ ಮಿನಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ.
ಸರಕು ಸಾಗಣೆ ಮಾಡುತ್ತಿದ್ದ ಈ ಮಿನಿ ಲಾರಿಯಲ್ಲಿ ಕೆಲವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಲಿಸುತ್ತಿದ್ದಾಗ ಚಾಲಕನ ಹತೋಟಿ ತಪ್ಪಿ ವಾಹನವು ರಸ್ತೆಯಲ್ಲೇ ಉರುಳಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆಯೇ ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.