ಚಿತ್ರದುರ್ಗ ಡಿಸೆಂಬರ್ 25: ಚಿತ್ರದುರ್ಗ ಬಳಿ ಸಂಭವಿಸಿದ ಅಪಘಾತದಲ್ಲಿ ಖಾಸಗಿ ಬಸ್ ಗೆ ಬೆಂಕಿ ಹೊತ್ತಿಕೊಂಡು 9 ಮಂದಿ ಸಜೀವ ದಹನವಾಗಿದ್ದುಸ ಘಟನೆಗೆ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ತಿಳಿಸಿದ್ದಾರೆ.
Read This- ಚಿತ್ರದುರ್ಗ ಭೀಕರ ಬಸ್ ಅಪಘಾತದಲ್ಲಿ 11 ಮಂದಿ ಸಜೀವ ದಹನ
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.
ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.
ಗೊರ್ಲತ್ತು ಕ್ರಾಸ್ ಬಳಿ ಮುಂಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ಗೆ ಎದುರು ಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡ್ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 9 ಮಂದಿ ಸಜೀವ ದಹನವಾಗಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.



