LATEST NEWS
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಏಳು ಮಂದಿ ಸಾವು
ಶಿಮ್ಲಾ, ಆಗಸ್ಟ್ 14: ‘ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ.
ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ ಏಳು ಮಂದಿ ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.
ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಸೋಲನ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಲಾ– ಕಾಲೇಜುಗಳಿಗೆ ರಜೆ: ಕಳೆದ 24 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ –ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ತಿಳಿಸಿದ್ದಾರೆ.