LATEST NEWS
ಪರಶುರಾಮನ ಮೂರ್ತಿ ನಿರ್ಮಾಣದಲ್ಲಿ ಮೋಸ ಮಾಡಿ ಜೇಬು ತುಂಬಿಕೊಂಡವರ ಅಲ್ಲ – ಸುನಿಲ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು ಜನವರಿ 09: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಎದುರು ಶರಣಾದ ನಕ್ಸಲ್ ರಿಗೆ ಪ್ಯಾಕೇಜ್ ನೀಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕಾರ್ಕಳ ಶಾಸಕ ಸುನಿಲ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಸರಿಯಾಗೇ ತಿರುಗೇಟು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರು ಕಳೆದ ತಿಂಗಳು ಛತ್ತೀಸ್‌ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಪ ಸುರಿಸಿದಾಗ ಯಾಕೆ ಬೆಚ್ಚಿ ಬಿದ್ದಿಲ್ಲ? ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಸವಾಲು ಹಾಕಿದ್ದಾರೆ.
ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರ್ಕಾರದ ಉಪಮುಖ್ಯಮಂತ್ರಿ ಆಗಿದ್ದ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಅವರಿಗೆ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಪ್ರಶ್ನಿಸಿದ್ದಾರೆ.
ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ ಎಂದಿದ್ದಾರೆ.
ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ, ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸಿ, ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯವಾಗಿದೆ. ಇದೇ ಕರ್ತವ್ಯವನ್ನು ನಮ್ಮ ಸರ್ಕಾರ ಪಾಲಿಸುತ್ತಾ ಬಂದಿದೆ ಎಂದು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
1 Comment