DAKSHINA KANNADA
ಸಿಎಂ ವಿರುದ್ದ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್ ಗೆ ಅನುಮತಿ, ತನಿಖೆಗೆ ತಡೆಯಾಜ್ಞೆ ಕೋರಿದ ಸಿಎಂ ಅರ್ಜಿ ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ..!
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು, ತನಿಖೆಗೆ ತಡೆಯಾಜ್ಞೆ ಕೋರಿದ ಸಿಎಂ ಅರ್ಜಿ ಇಂದು ಮಧ್ಯಾಹ್ನ ಹೈಕೋರ್ಟ್ ನಲ್ಲಿ ವಿಚಾರಣೆ ಬರಲಿದೆ.
ಪ್ರಾಸಿಕ್ಯೂಶನ್‌ಗೆ ತಡೆ ಕೋರಿ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಸಿಎಂ ಪರ ವಕೀಲ ಶತಭೀಷ್ ಶಿವಣ್ಣ ಅವರಿಂದ ಅರ್ಜಿ ಸಲ್ಲಿಕೆಯಾಯಿತು. ತ್ವರಿತವಾಗಿ ಅರ್ಜಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿಕೊಂಡರು. ನ್ಯಾಯಮೂರ್ತಿಗಳು ವಿಚಾರಣೆಯನ್ನು ಮಧ್ಯಾಹ್ನ 2.30ಕ್ಕೆ ಮುಂದೂಡಿದರು.
ರಾಜ್ಯಪಾಲರ ಅನುಮತಿ ರದ್ದುಪಡಿಸಲು ಕೋರಿ ಸಿದ್ದರಾಮಯ್ಯ ಅವರ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನದ 163ನೇ ವಿಧಿಯಂತೆ ಸಚಿವ ಸಂಪುಟದ ಶಿಫಾರಸು ಪಾಲಿಸಬೇಕು. ಅನುಮತಿಗೆ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ವಾದಿಸಿದರು.
ತುರ್ತು ವಿಚಾರಣೆಯ ಅಗತ್ಯವಿದೆ. ಕೇವಿಯಟ್ ಸಲ್ಲಿಸಿದವರಿಗೆ ಮಾಹಿತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿಗೂ ಅರ್ಜಿಯ ಪ್ರತಿ ಸಲ್ಲಿಸಲಾಗಿದೆ ಎಂದು ವಕೀಲರು ತಿಳಿಸಿದರು. ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಹೈಕೋರ್ಟ್ ಒಪ್ಪಿಗೆ ನೀಡಿತು.
You must be logged in to post a comment Login