LATEST NEWS
ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ
ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಕಾಂಗ್ರೇಸ್ ಕಾರ್ಯಕರ್ತರ ಸಂಭ್ರಮಾಚರಣೆ
ಉಡುಪಿ ಮೇ 19: ಸೋಲಿನ ಆತ್ಮಾವಲೋಕನ ಸಭೆಯಲ್ಲಿ ಸಂಭ್ರಮ ಆಚರಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕಾಂಗ್ರೇಸ್ ಉಡುಪಿಯಲ್ಲಿ ಹೀನಾಯ ಸೋಲು ಅನುಭವಿಸಿದ ಹಿನ್ನಲೆಯಲ್ಲಿ ನಡೆಯುತ್ತಿದ್ದ ಸಮಾರಂಭದಲ್ಲಿ ಈ ಘಟನೆ ನಡೆದಿದೆ.
ಯಡಿಯೂರಪ್ಪ ವಿಶ್ವಾಸಮತ ಸಾಬೀತುಪಡಿಸಲು ಸಾಧ್ಯವಾಗದೆ ರಾಜಿನಾಮೆ ನೀಡಿದ ಹಿನ್ನಲೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದಕ್ಕೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಘೋಷಣೆ ಕೂಗುವ ಮೂಲಕ ಸಂಭ್ರಮಿಸಿದರು.
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ನೇತೃತ್ವದಲ್ಲಿ ನಡೆಯುತ್ತಿದ್ದ ಸೋಲಿನ ಅವಲೋಕನ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಯಡಿಯೂರಪ್ಪ ರಾಜಿನಾಮೆ ನೀಡುತ್ತಿರುವುದು ಗೊತ್ತಾಗುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸುಳ್ಳು ಪ್ರಚಾರದಿಂದ ಗೆದ್ದರೆ ಯಡಿಯೂರಪ್ಪನಿಗಾದ ಸ್ಥಿತಿ ಬರುತ್ತೆ. ಸುಳ್ಳು ಪ್ರಚಾರ ಶಾಶ್ವತವಲ್ಲ. ಇನ್ನು ನಾನು ಬೆಂಗಳೂರಿಗೆ ಹೋದ ವೇಳೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಇನ್ನು ಮುಂದೆ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆದರೆ ನಾನು ಸುಮ್ಮನಿರಲ್ಲ. ಪೊಲೀಸ್ ಠಾಣೆಯಲ್ಲೇ ಧರಣಿ ಕೂರುತ್ತೇನೆ ಎಂದು ಸಮ್ಮಿಶ್ರ ಸರ್ಕಾರದ ಮುನ್ಸೂಚನೆ ಹಿನ್ನಲೆಯಲ್ಲಿ ಎಚ್ಚರಿಕೆ ನೀಡಿದರು.