ಕಾರವಾರ, ಮಾರ್ಚ್ 09: ಕುಡಿದ ಮತ್ತಿನಲ್ಲಿ ಕಂಟೇನರ್ ಚಲಾಯಿಸಿದ ಚಾಲಕನ ನಿರ್ಲಕ್ಷ್ಯದಿಂದ ಕಾರಿನ ಮೇಲೆ ಕಂಟೇನರ್ ಉರುಳಿಬಿದ್ದ ಪರಿಣಾಮ 8 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಅರಗಾ ಗ್ರಾಮದಲ್ಲಿ ನಡೆದಿದೆ.

ಘಟನೆಯ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇತರ ಕೆಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಕಾರವಾರ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಕಂಟೇನರ್ ಚಾಲಕ ಮದ್ಯಪಾನದ ಮತ್ತಿನಲ್ಲಿ ರಸ್ತೆಯಲ್ಲಿ ವಾಹನವನ್ನು ಅಡ್ಡಗಟ್ಟಿ ಅಲ್ಲಿದ್ದವರೊಂದಿಗೆ ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಬಳಿಕ ಸಿಟ್ಟಿನಿಂದ ಕಂಟೇನರ್ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ನಿಯಂತ್ರಣ ತಪ್ಪಿದ ಕಂಟೇನರ್ ಕಾರಿನ ಮೇಲೆ ಉರುಳಿಬಿದ್ದಿದೆ. ಇದರ ಪರಿಣಾಮವಾಗಿ ಕಾರಿನಲ್ಲಿದ್ದ 8 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಘಟನೆಯ ನಂತರ ಕಂಟೇನರ್ ಚಾಲಕನನ್ನು ಕಾರವಾರ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ದುರ್ಘಟನೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.