LATEST NEWS
ಮಾಸ್ಕ್ ಧರಿಸದೇ ಓಡಾಡುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ : ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್
ಉಡುಪಿ, ಆಗಸ್ಟ್. 19: ಕೊರೊನಾ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಇನ್ನು ಮಾಸ್ಕ್ ಧರಿಸದೇ ಓಡಾಟ ನಡೆಸುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಲು ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು, ಸಾರ್ವಜನಿಕ ಸ್ಥಳಗಳಲ್ಲಿ ಪಾಲಿಸಬೇಕಾದ ಶಿಷ್ಟಾಚಾರಗಳ ಬಗ್ಗೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಸಾರ್ವಜನಿಕರ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಕರೋನಾ ಸಂಬಂಧಿತ ಸರ್ಕಾರದ ಇತರ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆದೇಶಿಸಲಾಗಿರುತ್ತದೆ.
ಅದಾಗ್ಯೂ ಜಿಲ್ಲೆಯಲ್ಲಿ ಜನರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರಿ, ತೀರ ನಿರಾಸದಾಯಕ ವರ್ತನೆಯನ್ನು ತೋರುತ್ತಿರುವುದರಿಂದ, ಕರೋನಾ ಸಾಂಕ್ರಮಿಕವು ಜಿಲ್ಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುತ್ತಿದೆ. ಈ ಮಧ್ಯೆ ಕೋವಿಡ್-19 ರೋಗದ 3 ನೇ ಅಲೆಯು ತಲೆದೋರುತ್ತಿರುವುದನ್ನು ಆರೋಗ್ಯ ಇಲಾಖೆಯು ಎಚ್ಚರಿಸಿರುವುದು ಆತಂಕಕಾರಿ ಸಂಗತಿಯಾಗಿದೆ.
ಇಂತಹ ಸನ್ನಿವೇಶದಲ್ಲಿ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಹಾಗೂ ಇನ್ನಿತರ ಕೋವಿಡ್-19 ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದ್ದು, ಜಿಲ್ಲೆಯ ಜನರ ಆರೋಗ್ಯ ಹಿತದೃಷ್ಟಿಯಿಂದ ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುವಂತೆ ಮಾಡಲು, ಇನ್ನು ಮುಂದೆ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು.
ಈ ಬಗ್ಗೆ ಜಿಲ್ಲೆಯಲ್ಲಿ ಕೊರೋನಾ ಸಂಬAಧಿತ ನಿಯಮಗಳನ್ನು ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಯವರಿಂದ ಅಧಿಕಾರ ಪ್ರತ್ಯಾಯೋಜಿಸಲ್ಪಟ್ಟ ಅಧಿಕಾರಿಗಳು, ಸಾರ್ವಜನಿಕರ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವವರನ್ನು ಕಡ್ಡಾಯವಾಗಿ ಹತ್ತಿರದ ಕೋವಿಡ್-19 ಪರೀಕ್ಷಾ ಕೇಂದ್ರಗಳಲ್ಲಿ, ಕೋವಿಡ್-19 ಪರೀಕ್ಷೆಗೆ ಒಳಪಡಿಸುವುದು ಮತ್ತು ಅಂತಹ ವ್ಯಕ್ತಿಗಳ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ ತಾಲೂಕು ವೈದ್ಯಾಧಿಕಾರಿಗಳಿಗೆ ನೀಡುವುದು.
ಈ ಸಂಧರ್ಭದಲ್ಲಿ ಪ್ರತಿರೋಧ ಒಡುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.