LATEST NEWS
ಚುನಾವಣೆ ನೀತಿ ಸಂಹಿತೆ ಇದ್ದರೂ ಯಕ್ಷಗಾನ, ಕೋಲ, ಧಾರ್ಮಿಕ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ – ಜಿಲ್ಲಾಧಿಕಾರಿ
ಮಂಗಳೂರು ಮಾರ್ಚ್ 30 : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದರ ಜೊತೆಗೆ ನೀತಿ ಸಂಹಿತೆಯೂ ಜಾರಿಯಲ್ಲಿದೆ. ಆದರೆ ಕರಾವಳಿಯಲ್ಲಿ ಕೋಲ ಮತ್ತು ಯಕ್ಷಗಾನ ಸೇರಿದಂತೆ ಧಾರ್ಮಿಕ ಆಚರಣೆಗಳು ಹೆಚ್ಚಾಗಿ ಈ ವೇಳೆ ನಡೆಯುತ್ತದೆ.
ಈ ಹಿನ್ನಲೆ ಈ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದು. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಆರಾಧನೆ ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ ಎಂದಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅವಧಿಲ್ಲಿ ಯಾವುದೇ ಧರ್ಮಗಳ ಧಾರ್ಮಿಕ ಆಚರಣೆಗಳಿಗೂ ನೀತಿ ಸಂಹಿತೆ ಅನ್ವಯವಾಗದು. ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಗ್ಸ್ ಹಾಕಬೇಕಾದರೆ ಸ್ಥಳೀಯ ಚುನಾವಣಾಧಿಕಾರಿ ಅನುಮತಿ ಪಡೆಯಬೇಕಾಗುತ್ತದೆ ಎಂದರು. ಮದುವೆ ಇನ್ನಿತರ ಸಮಾರಂಭಗಳನ್ನು ನಡೆಸಲು ಯಾವುದೇ ನಿರ್ಬಂಧವಿಲ್ಲ. ಆದರೆ ಸ್ಥಳೀಯಾಡಳಿತಕ್ಕೆ ಮಾಹಿತಿ ನೀಡಬೇಕು ಎಂದರು. ಅಲ್ಲದೆ ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ನಡೆದು ದುರುಪಯೋಗ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಎಚ್ಚರಿಕೆ ನೀಡಿದ್ದಾರೆ.