LATEST NEWS
ದೆಹಲಿ ರೈಲ್ವೆ ನಿಲ್ದಾಣದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ 10 ಲಕ್ಷ ರೂಪಾಯಿ ಪರಿಹಾರ

ದೆಹಲಿ ಫೆಬ್ರವರಿ 16: ದೆಹಲಿ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಸಾವನಪ್ಪಿದ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ಕುಂಭಮೇಳಕ್ಕೆ ಹೊರಟಿದ್ದ ಭಕ್ತರಿಂದ ನವದೆಹಲಿ ರೈಲು ನಿಲ್ದಾಣ ತುಂಬಿ ತುಳುಕುತ್ತಿತ್ತು. ಅದಕ್ಕಾಗಿ 2 ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈ ರೈಲುಗಳಿಗೂ ಮೊದಲು ಭುವನೇಶ್ವರಕ್ಕೆ ತೆರಳಬೇಕಿದ್ದ ರಾಜಧಾನಿ ಮತ್ತು ಸ್ವತಂತ್ರ ಸೇನಾನಿ ಎಕ್ಸ್ಪ್ರೆಸ್ ರೈಲುಗಳು ತಡವಾಗಿ ನಿಲ್ದಾಣವನ್ನು ತಲುಪಿದವು. ಹೀಗಾಗಿ ರೈಲು ನಿಲ್ದಾಣದಲ್ಲಿ ಒಮ್ಮೆಗೆ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಯಿತು. ಇದೇ ಸಮಯಕ್ಕೆ ಪ್ಲಾಟ್ಫಾರ್ಮ್ 14 ಮತ್ತು 15ಕ್ಕೆ ಪ್ರಯಾಗ್ ರಾಜ್ಗೆ ಹೊರಟ ವಿಶೇಷ ರೈಲು ನಿಲ್ದಾಣಕ್ಕೆ ಆಗಮಿಸಿದೆ. ಈ ವೇಳೆ ಸಾವಿರಾರು ಜನರು ಏಕಾಏಕಿ ರೈಲಿಗೆ ನುಗ್ಗಿದ್ದಾರೆ. ಹೀಗಾಗಿ ರೈಲಿನ ಒಳಗೆ ಮತ್ತು ಹೊರಗೆ ಕಾಲ್ತುಳಿತ ಸಂಭವಿಸಿದೆ. ಈ ಅವಘಡದಲ್ಲಿ 18 ಮಂದಿ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.