ಬೆಳ್ತಂಗಡಿ ಮಾರ್ಚ್ 12: ಮಾರ್ಚ್ 2 ರಂದು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರನ್ನು ಕನ್ಯಾಡಿ ಗ್ರಾಮದ ಕೊರಗಪ್ಪ ಪೂಜಾರಿಯವರ ಪುತ್ರ ನವೀನ್ ಪೂಜಾರಿ ಎಂದು ಗುರುತಿಸಲಾಗಿದೆ. ಮಾರ್ಚ್ 2ರಂದು ಧರ್ಮಸ್ಥಳದಿಂದ ಉಜಿರೆ ಕಡೆಗೆ ಸಾಗುತ್ತಿದ್ದ ಪಿಕಪ್ ವಾಹನ ಹಾಗೂ ಉಜಿರೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಬೈಕ್ ನಡುವೆ ನೇತ್ರಾವತಿ ಸೇತುವೆ ಸಮೀಪ ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದ ಪರಿಣಾಮವಾಗಿ ನವೀನ್ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.