BELTHANGADI
ಧರ್ಮಸ್ಥಳ ಪ್ರಕರಣದ ಕುರಿತ ವರದಿ ಮಾಡದಂತೆ ಮಾಧ್ಯಮಗಳ ಮೇಲಿನ ನಿರ್ಬಂಧದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು ಅಗಸ್ಟ್ 01: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ವಿವಿಧ ಮಾಧ್ಯಮಗಳು ಮಾಡಿದ್ದ ಎಲ್ಲಾ ವರದಿಗಳು ಡಿಲೀಟ್ ಮಾಡಲು ಹಾಗೂ ಮುಂದೆ ಯಾವುದೇ ರೀತಿಯ ವರದಿ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದ ವಿಚಾರಣಾಧೀನ ನ್ಯಾಯಾಲಯದ ಏಕಪಕ್ಷಕೀಯ ಪ್ರತಿಬಂಧಕಾದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಪಡಿಸಿ ಮಹತ್ವದ ಆದೇಶ ಮಾಡಿದೆ. ಈ ಕುರಿತಂತೆ ಬಾರ್ ಅಂಡ್ ಬೆಂಚ್ ವೆಬ್ ಸೈಟ್ ವರದಿ ಮಾಡಿದೆ.
ದಕ್ಷಿಣ ಕನ್ನಡದ ಕುಡ್ಲ ರ‍್ಯಾಂಪೇಜ್ ಯುಟ್ಯೂಬ್ ಚಾನೆಲ್ ನ ಪ್ರಧಾನ ಸಂಪಾದಕ ಅಜಯ್ ಅವರು ಮಾಧ್ಯಮಗಳ ಮೇಲಿನ ನಿರ್ಬಂಧದ ಆದೇಶ ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಭಾಗಶಃ ಪುರಸ್ಕರಿಸಿದೆ. 8.7.2025ರಂದು ವಿಚಾರಣಾಧೀನ ನ್ಯಾಯಾಲಯವು ಮಾಡಿರುವ ಆಕ್ಷೇಪಾರ್ಹವಾದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ರದ್ದುಪಡಿಸಲಾಗಿದೆ.

ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ/ಪ್ರಕಟ ಮಾಡದಂತೆ ಮಾಧ್ಯಮಗಳಿಗೆ ವಿಧಿಸಿದ್ದ ವಿಚಾರಣಾಧೀನ ನ್ಯಾಯಾಲಯದ ಏಕಪಕ್ಷಕೀಯ ಪ್ರತಿಬಂಧಕಾದೇಶವನ್ನು ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಕುಡ್ಲ ರ‍್ಯಾಂಪೇಜ್ ಯುಟ್ಯೂಬ್ ಚಾನೆಲ್ ನ ಪ್ರಧಾನ ಸಂಪಾದಕ ಅಜಯ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅಜಯ್ ಅವರನ್ನು ಪ್ರತಿನಿಧಿಸಿದ್ದ ವಕೀಲ ಎ ವೇಲನ್ ಅವರು ವಿಚಾರಣಾಧೀನ ನ್ಯಾಯಾಲಯದ ಪ್ರತಿಬಂಧಕಾದೇಶವು ವ್ಯಾಪ್ತಿ ಮೀರಿದ್ದು, ಅದು ನಿಲ್ಲುವುದಿಲ್ಲ. ನಿರಂತರವಾಗಿ ಹರ್ಷೇಂದ್ರ ಕುಮಾರ್ ಅವರು
ಎಷ್ಟು ಪ್ರತಿಬಂಧಕಾದೇಶ ಪಡೆದುಕೊಂಡಿದ್ದಾರೆ ಎಂಬುದನ್ನು ಹೇಳಬೇಕು. ಮಾನಹಾನಿಯ ಅಂಶಗಳನ್ನು ಪರಿಶೀಲಿಸದೇ ವಿಚಾರಣಾಧೀನ ನ್ಯಾಯಾಲಯವು ಮಾಧ್ಯಮಗಳನ್ನು ನಿರ್ಬಂಧಿಸಿದೆ. 9,000 ಲಿಂಕ್‌ಗಳನ್ನು ಮೂರು ತಾಸಿನಲ್ಲಿ ಪರಿಶೀಲಿಸಿ ಪ್ರತಿಬಂಧಕಾದೇಶ ಮಾಡಲಾಗುತ್ತದೆಯೇ? ಆ ವಿಡಿಯೊಗಳಲ್ಲಿ ಮಾನಹಾನಿಯಾಗುವಂಥ ಯಾವುದೇ ಅಂಶಗಳಿಲ್ಲ. ಇಂಥ ನಿರ್ಬಂಧ ಆದೇಶಗಳನ್ನು ಮಾಡಿದರೆ ಸುಪ್ರೀಂ ಕೋರ್ಟ್‌ನ ಮಹತ್ವದ ತೀರ್ಪುಗಳಿಗೆ ಅಡಿಗಲ್ಲಾಗಿರುವ ತನಿಖಾ ಪತ್ರಿಕೋದ್ಯಮದ ಪ್ರಶ್ನೆ ಏನಾಗಬೇಕು? ಮಾಧ್ಯಮಗಳ ವರದಿಯನ್ನೇ ಆಧರಿಸಿ ರಾಜ್ಯ ಸರ್ಕಾರವು ಧರ್ಮಸ್ಥಳದಲ್ಲಿ ಕೊಲೆ ಮಾಡಿರುವ ಹೂತಿರುವ ಶವಗಳ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸಿದೆ. ಇದನ್ನು ನ್ಯಾಯಾಲಯ ಪರಿಗಣಿಸಬೇಕು” ಎಂದಿದ್ದರು.
ಇದೀಗ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಇದರಿಂದ ಹರ್ಷೇಂದ್ರ ಕುಮಾರ್ ಅವರಿಗೆ ಹಿನ್ನಡೆಯಾಗಿದೆ. ವಿಸ್ತ್ರತ ಆದೇಶ ಇನ್ನಷ್ಟೇ ಬರಬೇಕಾಗಿದೆ.
ಸುದ್ದಿಯ ಹೆಚ್ಚಿನ ಮಾಹಿತಿಗೆ ಈ ಲಿಂಕ್
https://kannada.barandbench.com/news/hc-quashes-media-gag-order-in-dharmshala-case-asks-trial-court-consider-ia-afresh-and-directs-parties-to-co-operate