ಬೆಳ್ತಂಗಡಿ ಡಿಸೆಂಬರ್ 10: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ ಐಟಿ ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿದ್ದು, ಅದರಲ್ಲಿ 6 ಮಂದಿ ಯಾವ ರೀತಿ ನ್ಯಾಯಾಲಯದ (Court) ದಾರಿ ತಪ್ಪಿಸಿದ್ದಾರೆ ಎಂಬುದನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ.ಅವರ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ ಗಳ ಸುರಿಮಳೆ ಹೊರಿಸಲಾಗಿದೆ
ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ್ಯ ನಡೆಸಿದ ಪ್ರಕರಣದಲ್ಲಿ ದೂರು ನೀಡಿದವರೇ ಆರೋಪಿಗಳಾಗಿದ್ದಾರೆ.

ಚಿನ್ನಯ್ಯ, ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ವಿಠ್ಠಲ ಗೌಡ, ಟಿ. ಜಯಂತ್ ಹಾಗೂ ಸುಜಾತಾ ಭಟ್ ಸೇರಿ ಆರೂ ಆರೋಪಿಗಳು ಅಪರಾಧ ಕೃತ್ಯದಲ್ಲಿ ಶಾಮೀಲಾಗಿರುವ ಬಗ್ಗೆ ಎಸ್​ಐಟಿ ದೃಢಪಡಿಸಿದೆ.
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನವೆಂಬರ್ 20 ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿತ್ತು. ಈ ತನಿಖಾ ವರದಿಯಲ್ಲಿ 6 ಮಂದಿ ಯಾವ ರೀತಿ ನ್ಯಾಯಾಲಯದ (Court) ದಾರಿ ತಪ್ಪಿಸಿದ್ದಾರೆ ಎಂಬುದನ್ನು ಎಳೆ ಎಳೆಯಾಗಿ ಉಲ್ಲೇಖಿಸಲಾಗಿದೆ. ಬುರುಡೆ ಗ್ಯಾಂಗ್ ಸದಸ್ಯರ ಮೇಲೆ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ ಗಳ ಸುರಿಮಳೆ ಹೊರಿಸಲಾಗಿದೆ.

ಹಣದ ಆಮಿಷಕ್ಕೆ ಒಳಗಾಗಿ ಎ೧ ಚಿನ್ನಯ್ಯ ಬುರುಡೆ ಕಥೆ ಕಟ್ಟಿದ್ದ. ಬುರುಡೆ ಗ್ಯಾಂಗ್ ಚಿನ್ನಯ್ಯನಿಗೆ ಹಣ ಕೊಟ್ಟು ಪುಸಲಾಯಿಸಿತ್ತು. ಅಪರಿಚಿತ ಶವಗಳನ್ನು ಹೂತಿದ್ದೇನೆಂದು ಚಿನ್ನಯ್ಯನಿಂದ ಸುಳ್ಳು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗಿತ್ತು. ಚಿನ್ನಯ್ಯನಿಗೆ ಮೊದಲಿಂದ ಪರಿಚಿತನಾಗಿದ್ದ ವಿಠ್ಠಲಗೌಡ ಮಹೇಶ್ ತಿಮರೋಡಿ ಮನೆಗೆ ಆತನನ್ನು ಕರೆದೊಯ್ದಿದ್ದ. ತಿಮರೋಡಿ ಮನೆಯಲ್ಲಿ ನಡೆದಿದ್ದ ಸಭೆಯಲ್ಲಿ ಮಟ್ಟಣ್ಣನವರ್, ಜಯಂತ್, ವಿಠ್ಠಲಗೌಡ ಭಾಗಿಯಾಗಿದ್ದು, ಧರ್ಮಸ್ಥಳ ಮೇಲ್ವಿಚಾರಕರ ವಿರುದ್ಧ ಪಿತೂರಿಗೆ ಪ್ಲ್ಯಾನ್ ನಡೆದಿತ್ತು. ಅದರಂತೆ ತಲೆ ಬುರುಡೆಯೊಂದನ್ನು ಚಿನ್ನಯ್ಯನಿಗೆ ಕೊಟ್ಟು ಪೊಲೀಸರಿಗೆ ದೂರು ಕೊಡಿಸಿದ್ದರು. ನ್ಯಾಯಾಧೀಶರ ಮುಂದೆ ಚಿನ್ನಯ್ಯ ಹೇಳಿಕೆ ಕೊಡುವಂತೆ ಪ್ರೇರೇಪಿಸಿದ್ದರು.

ಇನ್ನೊಂದೆಡೆ ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ‌ ಸಲ್ಲಿಸಿರುವ ವರದಿಯ ಕುರಿತಾಗಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಎಸ್.ಐ.ಟಿ ಪರವಾಗಿ ವಾದ ಮಂಡನೆ ಮುಕ್ತಾಯವಾಗಿದ್ದು, ಅಪೂರ್ಣ ವರದಿಯ ಹಿನ್ನಲೆಯಲ್ಲಿ ಸುಳ್ಳು ಸಾಕ್ಷಿಯ ಕುರಿತು ಈ ಕೂಡಲೇ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಪ್ರಕರಣದ ತೀರ್ಪನ್ನು ಡಿಸೆಂಬರ್ 26ಕ್ಕೆ ಮುಂದೂಡಿದೆ.

 

Share Information