LATEST NEWS
ಮಂಗಳೂರು ಸಿಸಿಬಿ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ಡ್ರಗ್ ಪೆಡ್ಲರ್…!!
ಮಂಗಳೂರು ಸೆಪ್ಟೆಂಬರ್ 22: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮತ್ತೊಂದು ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿರುತ್ತಾರೆ. ಬಂಧಿತರನ್ನು ಉಳ್ಳಾಲ ನಿಸಾಲಿ ಜಾಕೀರ್(29), ಬಂಟ್ವಾಳದ ಕಾರ್ತಿಕ್ ಸುವರ್ಣ(27) ಎಂದು ಗುರುತಿಸಲಾಗಿದೆ.
ಆರೋಪಿಗಳು ಮಂಗಳೂರು ನಗರದ ಉಳ್ಳಾಲಬೈಲ್ ಪರಿಸರದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ವಶದಲ್ಲಿರಿಸಿಕೊಂಡು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಟ್ಟು 20 ಗ್ರಾಂ ತೂಕದ ರೂ. 1,00,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಹೊಂಡಾ ಅಕ್ಟಿವಾ ಸ್ಕೂಟರ್, ಮೊಬೈಲ್ ಫೋನ್ ಗಳು-2, ನಗದು ರೂ. 3300/- ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 2,15,000/-ಆಗಬಹುದು. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿಗಳ ಪೈಕಿ ಜಾಕೀರ್ ಎಂಬಾತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನಿಸಿದ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಇನ್ನೋರ್ವ ಆರೋಪಿ ಕಾರ್ತಿಕ್ ಎಂಬಾತನ ವಿರುದ್ದ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡಿದ ದಾಖಲಾಗಿರುತ್ತದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿರುತ್ತಾರೆ.