Connect with us

LATEST NEWS

ಮಾದಕ ವಸ್ತು ದುಷ್ಪರಿಣಾಮ ಕುರಿತು ಪಠ್ಯ ಪುಸ್ತಕದಲ್ಲಿ ಅಳವಡಿಸಬೇಕು :ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ

ಉಡುಪಿ, ಜೂನ್ 27 : ಇಂದಿನ ಯುವಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಮಾದಕ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗದಂತೆ ತಡೆಯಲು ಪಠ್ಯಕ್ರಮದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಪಾಠಗಳನ್ನು ಅಳವಡಿಸಿ, ಸರಿಯಾದ ಮಾಹಿತಿ ನೀಡುವುದರಿಂದ ಈ ಸಮಸ್ಯೆ ಹೋಗಲಾಡಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಅಭಿಪ್ರಾಯಪಟ್ಟರು.

ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ವಿಕಲ ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬಯಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ ಹಾಗೂ ಮಣಿಪಾಲ ಮಹಿಳಾ ಸಮಾಜ ಇವರ ಸಹಯೋಗದಲ್ಲಿ ನಡೆದ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

ಜಗತ್ತಿನಲ್ಲಿ ಸುಮಾರು 200 ಮಿಲಿಯನ್‌ನಷ್ಟು ಜನರು ಮಾದಕ ವ್ಯಸನದಿಂದ ಬಳಲುತ್ತಿದ್ದಾರೆ. ಆಲ್ಕೋಹಾಲ್, ಸಿಗರೇಟ್, ತಂಬಾಕು, ಡ್ರಗ್ಸ್, ಅಫೀಮು, ಕೊಕೈಲ್‌ನಂತಹ ಮಾದಕ ದ್ರವ್ಯಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದ್ದು, ದುಷ್ಪರಿಣಾಮಗಳ ಅರಿವಿದ್ದರೂ ಕೂಡ ಯುವಜನತೆ ವ್ಯಸನಿಗಳಾಗಿ ಅದರಿಂದ ಹೊರಬರಲಾಗದೆ ಜೀವವನ್ನೇ ಕಳೆದುಕೊಳ್ಳುತ್ತಿದ್ದು, ಇದರಿಂದಾಗುವ ತೊಂದರೆಗಳ ಬಗ್ಗೆ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳು ಹಾಗೂ ಪಠ್ಯಕ್ರಮದಲ್ಲಿ ಪಾಠಗಳನ್ನು ಅಳವಡಿಸಬೇಕು. ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುವುದರಿಂದ ದೇಶದ ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಮ್ ಹಾಕೆ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವ್ಯಸನಗಳ ಬಗ್ಗೆ ಪ್ರತಿದಿನ ಪ್ರಕರಣಗಳು ದಾಖಲಾಗುತ್ತಿವೆ. ಸಾಮಾನ್ಯವಾಗಿ ಮನೆಯಿಂದ ಹೊರ ಉಳಿದವರು, ಸ್ನೇಹಿತರ ಜೊತೆಗೂಡದವರು ಅಥವಾ ಮಾನಸಿಕ ನೋವು ಅನುಭವಿಸುವ ವ್ಯಕ್ತಿಗಳು ಮಾದಕ ವ್ಯಸನಿಗಳಾಗುತ್ತಾರೆ. ಚಿಕ್ಕ ಮಕ್ಕಳಿಂದ ಹಿಡಿದು ಯುವಕರು, ವಿದ್ಯಾವಂತರು, ಬುದ್ದಿವಂತರೇ ಇಂತಹ ಚಟಗಳಿಗೆ ಮಾರು ಹೋಗುತ್ತಿದ್ದು, ಇದರಿಂದ ಸಮಾಜಕ್ಕೆ, ಕುಟುಂಬಗಳಿಗೆ ಮತ್ತು ದೇಶದ ಭದ್ರತೆಗೂ ದಕ್ಕೆ ತರುವಂತಹ ಸಮಸ್ಯೆ ಆಗುತ್ತಿದೆ. ಮಾದಕ ವ್ಯಸನದಿಂದ ಹೊರಬರಲು ಕ್ರೀಡೆ, ಕಲೆ, ಈಜು ಮತ್ತು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *