ಮಂಗಳೂರು, ಜುಲೈ 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಆಗಸ್ಟ್ 1 (ಶನಿವಾರ) ರಂದು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿದೆ.
ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC), ಬೆಂಗಳೂರು ನೀಡಿರುವ ಮುನ್ಸೂಚನೆಯ ಪ್ರಕಾರ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು, ವಸತಿ ಶಾಲೆಗಳು,12ನೇ ತರಗತಿವರೆಗಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳು (PUC), ವಸತಿ ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳು, ವಸತಿ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಶಿಕ್ಷಣ ಸಂಸ್ಥೆಗಳನ್ನು ನಡೆಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಪೋಷಕರು ಹಾಗೂ ವಾಹನ ಚಾಲಕರು ಮಕ್ಕಳನ್ನು ನೀರು ತುಂಬಿರುವ ತಗ್ಗು ಪ್ರದೇಶಗಳು, ಕೆರೆಗಳು, ನದಿತೀರಗಳು ಹಾಗೂ ಸಮುದ್ರ ತೀರಗಳಿಗೆ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ. ಅದೇ ರೀತಿ, ಹವಾಮಾನ ವೈಪರೀತ್ಯದ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚಿಸಿದೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲೇ ಉಳಿದು, ವಿಪತ್ತು ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ನಿರ್ದೇಶಿಸಲಾಗಿದೆ. ಜೊತೆಗೆ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರಗಳು ಮತ್ತು ಕಡಲತೀರಗಳಿಗೆ ಭೇಟಿ ನೀಡಬಾರದು. ಪ್ರತಿ ತಾಲ್ಲೂಕಿನಲ್ಲಿ ಅಗತ್ಯವಿದ್ದರೆ ಆರೈಕೆ ಕೇಂದ್ರಗಳನ್ನು ತೆರೆಯಲು ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸನ್ನದ್ಧವಾಗಿರಲು ಸಂಬಂಧಿತ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಗಿದೆ.