LATEST NEWS
ಪರಿಶಿಷ್ಟ ಜಾತಿ ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ನೀಡದ ಬಗ್ಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ತನಿಖೆ – ಉಡುಪಿ ಜಿಲ್ಲಾಧಿಕಾರಿ
ಪರಿಶಿಷ್ಟ ಜಾತಿ ಪಂಗಡದ ಗುತ್ತಿಗೆದಾರರಿಗೆ ಕಾಮಗಾರಿ ನೀಡದ ಬಗ್ಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ತನಿಖೆ – ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಜನವರಿ 30 : ಲೋಕೋಪಯೋಗಿ ಇಲಾಖೆ, ಪಿ.ಆರ್.ಇ.ಡಿ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳಲ್ಲಿ ಪ.ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಶೇಕಡ 25 ಮೀಸಲಾತಿ ಇಡಬೇಕೆಂಬ ನಿಯಮವಿದ್ದರೂ ಇದನ್ನು ಉಲ್ಲಂಘಿಸಿ ಇತರರಿಗೆ ಕಾಮಗಾರಿಗಳನ್ನು ನೀಡುತ್ತಿರುವ ಕುರಿತು ಪ.ಜಾತಿ ಮತ್ತು ಪ.ಪಂಗಡದ ಗುತ್ತಿಗೆದಾರರ ದೂರಿನ ಹಿನ್ನಲೆಯಲ್ಲಿ ಈ ಕುರಿತಂತೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಅವರು ಬುಧವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ.ಜಾತಿ ಹಾಗೂ ಪ.ಪಂಗಡಗಳ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ.ಜಾತಿ ಮತ್ತು ಪಂಗಡದ ಗುತ್ತಿಗೆದಾರರಿಗೆ ಶೇಕಡ 25 ಮೀಸಲಾತಿಯಂತರ ಕಾಮಗಾರಿಗಳನ್ನು ನೀಡುತ್ತಿಲ್ಲ ಹಾಗೂ ಕಾಮಗಾರಿಗಳನ್ನು ರಾಂಡಮೈಶೆನ್ ಮೂಲಕ ಮಾಡದೇ ಹೊಂದಾಣಿಕೆ ಮೂಲಕ ಮಾಡಿಕೊಳ್ಳುವಂತೆ ಅಧಿಕಾರಿಗಳು ಸೂಚಿಸುತ್ತಿದ್ದಾರೆ ಎಂದು ಪ.ಜಾತಿ ಮತ್ತು ಪಂಗಡದ ಗುತ್ತಿಗೆದಾರರು ದೂರಿದ ಹಿನ್ನಲೆಯಲ್ಲಿ, ಈ ಬಗ್ಗೆ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಸಿ ಸಂಬಂದಪಟ್ಟವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ತಿಳಿಸಿದರು.
ಜಿಲ್ಲೆಯಲ್ಲಿ ಡಿಸಿ ಮನ್ನಾ ಜಾಗ ಮಂಜೂರು ಮಾಡುವ ಬಗ್ಗೆ ಸಂಬಂದಪಟ್ಟ ಗ್ರಾಮ ಪಂಚಾಯತ್ ಪಿಡಿಓ ಗಳು ಪರಿಶೀಲಿಸಿ ಸರಿಯಾದ ನಿರ್ಣಯ ಮಾಡಿ, ತಪ್ಪು ನಿರ್ಣಯಗಳಾಗಿದ್ದಲ್ಲಿ ಕೂಡಲೇ ರದ್ದು ಪಡಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಡಿಸಿ ಮನ್ನಾ ಭೂಮಿ ಅತಿಕ್ರಮಣವಾಗಿರುವ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಎಲ್ಲಾ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.