LATEST NEWS
ಮುಸ್ಲಿಂರಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಿಸುವವರ ವಿರುದ್ದ ಕಾನೂನು ಕ್ರಮ ಜರುಗಿಸಿ – ಮಾಜಿ ಸಿಎಂ ಸಿದ್ದರಾಮಯ್ಯ

ಉಡುಪಿ ಮಾರ್ಚ್ 19: ದೇವಸ್ಥಾನ ಜಾತ್ರೆಗಳಲ್ಲಿ ಮುಸ್ಲಿಂ ಸಮುದಾಯದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸುತ್ತಿರುವ ಹಿಂದೂ ಸಂಘಟನೆಗಳ ಆಗ್ರಹಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಎಲ್ಲರೂ ಸ್ವತಂತ್ರರು, ಯಾರು ಯಾರಿಗೂ ಬೆದರಿಕೆ ಹಾಕುವಂತಿಲ್ಲ. ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲು ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿಗೆ ವಿರುದ್ಧವಾದ ನಡವಳಿಕೆ ಸರಿಯಲ್ಲ. ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದರು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ಕೊಡಿ. ಭಗವದ್ಗೀತೆ, ಕುರಾನ್ ಅಥವಾ ಬೈಬಲ್ ಬೋಧಿಸಿ. ಆದರೆ, ತಾರತಮ್ಯ ಮಾಡಬೇಡಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.