LATEST NEWS
ಕರಾವಳಿಯಲ್ಲಿ ಭಾರಿ ಮಳೆ ಸಂಭವ – ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ಕರಾವಳಿಯಲ್ಲಿ ಭಾರಿ ಮಳೆ ಸಂಭವ – ಹವಾಮಾನ ಇಲಾಖೆಯಿಂದ ಹೈ ಅಲರ್ಟ್
ಮಂಗಳೂರು ಅಗಸ್ಟ್ 15: ಕೇರಳದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಈಗ ಕರ್ನಾಟಕದ ಕರಾವಳಿಯಲ್ಲಿಯೂ ಅಬ್ಬರಿಸುತ್ತಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಕೇಂದ್ರ ಹವಮಾನ ಇಲಾಖೆ ಹೈ ಅಲರ್ಟ್ ಘೋಷಿಸಿದೆ.
ಕರಾವಳಿಯಲ್ಲಿ ಈಗಾಗಲೇ ಭಾರಿ ಮಳೆ ಸುರಿಯುತ್ತಿದ್ದು, ಜಿಲ್ಲೆಯ ಎಲ್ಲಾ ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿದೆ. ಕರಾವಳಿಯ ಬಹುತೇಕ ತಗ್ಗು ಪ್ರದೇಶಗಳು ನೀರಿನಲ್ಲಿ ಮುಳುಗಡೆಯಾಗಿದೆ. ಈಗ ಹವಮಾನ ಇಲಾಖೆ ಮತ್ತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೈ ಅಲರ್ಟ್ ಘೋಷಿಸಿರುವುದು ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ.

ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಲ್ಲಿನ ಜನಜೀವನ ತೀವ್ರ ಅಸ್ತವ್ಯಸ್ಥಗೊಂಡಿದೆ. ರೈಲು ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಲವು ವಿಮಾನಗಳ ಮಾರ್ಗಗಳನ್ನು ಬದಲಿಸಲಾಗಿದೆ.
ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಹಲವು ಬೋಟುಗಳು ಮುಳುಗಡೆಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಕರಾವಳಿಯ ಸಮುದ್ರದಲ್ಲಿ ತೀವ್ರ ಗಾಳಿ ಬೀಸುತ್ತಿದ್ದು, ಭಾರಿ ಗಾತ್ರದ ಅಲೆಗಳು ಸಮುದ್ರದಲ್ಲಿ ಏಳಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಕಡಲು ಅಬ್ಬರ ಹೆಚ್ಚಾಗಿರುವುದರಿಂದ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದೆ.