LATEST NEWS
ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪಾದಯಾತ್ರೆ – ವಿನಯ್ ಕುಮಾರ್ ಸೊರಕೆ ಸೇರಿದಂತೆ 22 ಮಂದಿ ಕಾಂಗ್ರೇಸ್ ಮುಖಂಡರ ಮೇಲೆ ಕೇಸ್
ಉಡುಪಿ ಜನವರಿ 15: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸಹಿತ 22 ಕಾಂಗ್ರೆಸ್ ಮುಖಂಡರ ವಿರುದ್ಧ ದೂರು ದಾಖಲಾಗಿದೆ.
ಕೋಟದಲ್ಲಿ ಕೊರಗ ಸಮುದಾಯದವರ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿ ಜನವರಿ 12 ರಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಮಣಿಪಾಲದಲ್ಲಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದ್ದರು.
ಈ ಪಾದಯಾತ್ರೆಗೆ ಕಾಂಗ್ರೇಸ್ ಮುಖಂಡರು ಸಕ್ಷಮ ಪ್ರಾಧಿಕಾರದಿಂದ ಯಾವುದೇ ಅನುಮತಿ ಪಡೆದುಕೊಂಡಿರಲಿಲ್ಲ, ಅಲ್ಲದೆ ಕೊರೊನಾ ಆದೇಶ ಉಲ್ಲಂಘಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಗುಂಪುಗೂಡಿ ಭಾಷಣ ನಡೆಸಿದ್ದರು ಎಂದು ದೂರಿನಲ್ಲಿ ದಾಖಲಾಗಿದೆ. ಈ ಸಂಬಂಧ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಯಶವಂತ್ ಪ್ರಭು ಎಂಬವರು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನಲೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಸೇರಿದಂತೆ 22 ಮಂದಿ ಕಾಂಗ್ರೇಸ್ ಮುಖಂಡರ ಮೇಲೆ ಪ್ರಕರಣ ದಾಖಲಾಗಿದೆ.