LATEST NEWS
ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ – ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕೇಸ್
ಉಡುಪಿ, ಸೆಪ್ಟೆಂಬರ್ 09: ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿಜಿ ಅವರಿಗೆ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಲಾಗಿತ್ತು. ಆದರೆ, ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕೆ ಹಿಜಾಬ್ ಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಪ್ರಶಸ್ತಿ ತಡೆ ಹಿಡಿದಿತ್ತು. ಪ್ರಾಂಶುಪಾಲರಿಗೆ ಘೋಷಿಸಿದ್ದ ಪ್ರಶಸ್ತಿ ತಡೆ ಹಿಡಿದಿದ್ದಕ್ಕೆ ಬಿಜೆಪಿ ನಾಯಕರು ಮಣಿಪಾಲದ ಸಿಂಡಿಕೇಟ್ ಸರ್ಕಲ್ನಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ರಸ್ತೆ ತಡೆದು ಮುಖ್ಯಮಂತ್ರಿಗಳ ಪ್ರತಿಕೃತಿ ಚಪ್ಪಲಿಯಿಂದ ಹೊಡೆದು ಬೆಂಕಿ ಹಚ್ಚಿದ್ದರು.
ಶಾಂತಿಗೆ ಭಂಗ ತರುವ ಉದ್ದೇಶದಿಂದ ಕೃತ್ಯ ಎಸಗಿದ್ದಾರೆ ಎಂದು ಎನ್ಎಸ್ಯುಐ ಮುಖಂಡ ಸೌರಭ್ ಬಲ್ಲಾಳ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login