LATEST NEWS
ಫಿಶ್ ಪ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ – ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಮಂಗಳೂರು ಎಪ್ರಿಲ್ 18: ವಿಶೇಷ ಆರ್ಥಿಕ ವಲಯ ಮೀನಿನ ಫ್ಯಾಕ್ಟರಿಯಲ್ಲಿ ಸಂಭವಿಸಿದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಶ್ರೀ ಉಲ್ಕಾ ಎಲ್ಎಲ್ಪಿ ಮೀನು ಸಂಸ್ಕರಣಾ ಕಂಪನಿಯ ತ್ಯಾಜ್ಯ ಸಂಗ್ರಹ ತೊಟ್ಟಿಯಲ್ಲಿ ವಿಷಾನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ.ಮೃತಪಟ್ಟವರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು.
ಭಾನುವಾರ ರಾತ್ರಿ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕನ್ನು ಶುಚಿಗೊಳಿಸಲು ಕೆಳಗಿಳಿದಿದ್ದ. ಈ ವೇಳೆ ಏಕಾಏಕಿ ವಿಷಾನಿಲ ಸೋರಿಕೆಯಾಗಿ ಆತ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು 8 ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡ ಅಸ್ವಸ್ಥಗೊಂಡು, ಉಸಿರಾಟದಲ್ಲಿ ಏರುಪೇರಾಗಿತ್ತು. ಕೂಡಲೇ ಅವರೆಲ್ಲರನ್ನೂ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಅಷ್ಟರಲ್ಲಿ ಮೂವರು ಮೃತಪಟ್ಟಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಐವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೆ ಸೋಮವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
