KARNATAKA
ಹಿರಿಯ ರಾಜಕಾರಣಿ ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ನಿಧನ..!D.B Chandregowda
ಚಿಕ್ಕಮಗಳೂರು : ಹಿರಿಯ ರಾಜಕಾರಣಿ, ಮಾಜಿ ಸಚಿವ ಡಿ.ಬಿ ಚಂದ್ರೇಗೌಡ(87) ಸೋಮವಾರ ಮಧ್ಯರಾತ್ರಿ ಮೂಡಿಗೆರೆಯ ದಾರದಹಳ್ಳಿಯ ತಮ್ಮ ನಿವಾಸ ‘ಪೂರ್ಣಚಂದ್ರ’ದಲ್ಲಿ ವಯೋ ಸಹಜ ಅನಾರೋಗ್ಯದಿಂದ ನಿಧನರಾದರು.
ಪತ್ನಿ ಪೂರ್ಣಿಮಾ, ನಾಲ್ವರು ಪುತ್ರಿಯರನ್ನು ಚಂದ್ರೇ ಗೌಡರು ಅಗಲಿದ್ದಾರೆ. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ಅವರ ಪುತ್ರ ಡಿ.ಬಿ. ಚಂದ್ರೇಗೌಡ, 1936 ಆಗಸ್ಟ್ 26 ರಂದು ಜನಿಸಿದ್ದರು. ಆಪ್ತ ವಲಯದಲ್ಲಿ ಡಿಬಿಸಿ ಎಂದೇ ಜನಾನೂರಾಗಿಯಾಗಿದ್ದ ಡಿ.ಬಿ ಚಂದ್ರೇಗೌಡರು, ಕಾನೂನು ಪದವಿ ಪಡೆದು ವಕೀಲ ವೃತ್ತಿಯಲ್ಲಿ ನಿರತರಾಗಿದ್ದರು. 1971ರಲ್ಲಿ ಕಾಂಗ್ರೆಸ್ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಅವರು, ವಿಧಾನಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರಾಗುವ ಮೂಲಕ ನಾಲ್ಕೂ ಸದನಗಳಲ್ಲಿ ಸದಸ್ಯರಾಗಿದ್ದ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
1971ರಲ್ಲಿ ಚುನಾವಣ ಅಖಾಡಕ್ಕಿಳಿದ ಡಿ.ಬಿ. ಚಂದ್ರೇಗೌಡ ಅವರು ಮೊದಲ ಬಾರಿಗೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. 1977ರಲ್ಲಿ 2ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದ ಅವರು, 1978ರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸುವ ಸಂದರ್ಭ ಬಂದಾಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಗೆಲುವಿಗೆ ಶ್ರಮಿಸುವ ಮೂಲಕ ದೇಶದ ಗಮನ ಸೆಳೆದಿದ್ದರು.
ಸಂಸದರ ಸ್ಥಾನಕ್ಕೆ ರಾಜೀನಾಮೆಯ ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದೇವರಾಜು ಅರಸು ಅವರೊಂದಿಗೆ ಕ್ರಾಂತಿರಂಗದಲ್ಲಿ ಗುರುತಿಸಿಕೊಂಡು 1980-81ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದರು.
ಸಮಾಜವಾದಿ ಚಿಂತಕರಾಗಿದ್ದ ಡಿ.ಬಿ ಚಂದ್ರೇಗೌಡರು ನಾಲ್ಕೂವರೆ ದಶಕಗಳ ಕಾಲ ರಾಜಕೀಯ, ಸಾರ್ವಜನಿಕ ಜೀವನದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. 2014ರಿಂದ ಈಚೆಗೆ ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದ ಅವರು, ದಾರದಹಳ್ಳಿಯ ತಮ್ಮ ‘ಪೂರ್ಣಚಂದ್ರ’ ನಿವಾಸದಲ್ಲಿ ವಿಶ್ರಾಂತ ಜೀವನ ನಡೆಸುತ್ತಿದ್ದರು.
ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.